ಕರಾವಳಿ ವಾಯ್ಸ್ ನ್ಯೂಸ್ 

ಸಿದ್ದಾಪುರ: ಸರ್ಕಾರದ ಜನಪರ ಯೋಜನೆಗಳು ಕೇವಲ ಪಟ್ಟಿಯಲ್ಲಿ ಉಳಿಯದೆ ಬಡವರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

Banner Ad

ಹಲಿಗೇರಿ ಹೋಬಳಿಯಲ್ಲಿ ನಡೆದ ತಾಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ರಸ್ತೆ, ಚರಂಡಿ, ಕುಡಿಯುವ ನೀರು, ಶಾಲಾ-ಕಾಲೇಜು ಹಾಗೂ ವಿವಿಧ ಮೂಲಸೌಕರ್ಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಪ್ರಜಾಸೇವೆ ಸಭೆಗಳು ಸಹಕಾರಿಯಾಗುತ್ತಿವೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳಿಂದ 1.20 ಕೋಟಿಗೂ ಹೆಚ್ಚು ಕುಟುಂಬಗಳು ಪ್ರಯೋಜನ ಪಡೆಯುತ್ತಿದ್ದು, ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೂ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ‘ಭಾರತ್ ಜೋಡೋ’ ಯುವ ಸಂಘಟನೆಗಳಿಗೆ ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಸಾರ್ವಜನಿಕರ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಿ, 20 ದಿನಗಳೊಳಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು. ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರ ₹1 ಕೋಟಿ ಅನುದಾನ ನೀಡಿದೆ ಎಂದು ತಿಳಿಸಿದರು.

ಭೂ ಗ್ಯಾರಂಟಿ ಯೋಜನೆಯಡಿ ಈ ಹೋಬಳಿಯಲ್ಲಿ 63 ಎಕರೆ ಜಾಗ ಗುರುತಿಸಲಾಗಿದ್ದು, ನಿವೇಶನ ರಹಿತರು ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.

ಜಿಪಂ ಸಿಇಒ ಡಾ. ದಿಲೀಷ್ ಶಶಿ ಮಾತನಾಡಿ, ಪ್ರಜಾಸೇವೆ ಸಭೆಯಲ್ಲಿ ಸಮಸ್ಯೆಗಳ ಜೊತೆಗೆ ಪಂಚಾಯಿತಿ ಹಾಗೂ ಹೋಬಳಿ ಮಟ್ಟದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಲಹೆಗಳನ್ನೂ ನೀಡಬಹುದು ಎಂದರು.

ಎಸ್ಪಿ ದೀಪನ್ ಎಂ.ಎನ್. ಮಾತನಾಡಿ, ‘ಮನೆ ಮನೆಗೆ ಪೊಲೀಸ್’ ಹಾಗೂ ಹಿರಿಯ ನಾಗರಿಕರಿಗಾಗಿ ‘ಆಸರೆ’ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆನ್‌ಲೈನ್ ವಂಚನೆ, ಅಪರಿಚಿತ ಲಿಂಕ್‌ಗಳು ಹಾಗೂ ಮಾದಕವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ವಸತಿ, ರಸ್ತೆ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅಹವಾಲುಗಳು ಸಲ್ಲಿಕೆಯಾದವು. ಅಪಾಯಕಾರಿ ಮರಗಳ ತೆರವು, ವನ್ಯಜೀವಿಗಳಿಂದ ಬೆಳೆ ಹಾನಿ ತಡೆ, ಅತಿಕ್ರಮಣ ತೆರವು, ಬಸ್ ಸೌಲಭ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿ ಸಲ್ಲಿಸಿದರು. ಅತಿಕ್ರಮಣ ತೆರವು ಗೊಂದಲದ ಕುರಿತು ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಗೂ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವನ್ಯಜೀವಿ ಹಾವಳಿ ತಡೆಗೆ ಅಗತ್ಯವಿರುವ ಕಡೆ ಕಂದಕ ಹಾಗೂ ಸೋಲಾರ್ ಬೇಲಿ ನಿರ್ಮಿಸಲಾಗುವುದು ಎಂದು ಡಿಎಫ್‌ಒ ಸಂದೀಪ್ ಎಚ್. ಸೂರ್ಯವಂಶಿ ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಉಪವಿಭಾಗಾಧಿಕಾರಿ ಚಂದ್ರಶೇಖರ್ ಆರ್.ಜಿ., ತಾಪಂ ಇಒ ದೇವರಾಜ ಎಂ. ಹಿತ್ತಲಕೊಪ್ಪ, ತಹಸೀಲ್ದಾರ್ ಮಂಜುಳಾ ನಾಯಕ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನೆ ಇಲಾಖೆಯ ಫಲಾನುಭವಿಗಳಿಗೆ ಸವಲತ್ತುಗಳು ಹಾಗೂ ವಿಜಿ ಜಿ. ರಾಮ್ ಯೋಜನೆಯಡಿ ಜಾಬ್ ಕಾರ್ಡ್‌ಗಳನ್ನು ವಿತರಿಸಲಾಯಿತು.

 

Please Share: