ಕರಾವಳಿ ವಾಯ್ಸ್ ನ್ಯೂಸ್ 

ದಾಂಡೇಲಿ: ತಾಲೂಕಿನ ಅಂಬೇವಾಡಿ ಗಾಂವಠಾಣದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಗುರುವಾರ ನಡೆದಿದೆ. ವಿದ್ಯಾರ್ಥಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.

ಮೃತ ವಿದ್ಯಾರ್ಥಿಯನ್ನು ಕಾಶಿನಾಥ ಸಂತೋಷ ಲಮಾಣಿ (15) ಎಂದು ಗುರುತಿಸಲಾಗಿದೆ. ಅಂಬೇವಾಡಿ ಗಾಂವಠಾಣ ನಿವಾಸಿಯಾಗಿದ್ದ ಆತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಪೊಲೀಸ್ ದೂರಿನ ಪ್ರಕಾರ, ಗುರುವಾರ ಬೆಳಗ್ಗೆ 9.30ರಿಂದ ಮಧ್ಯಾಹ್ನ 1.45 ಗಂಟೆಯ ನಡುವಿನ ಅವಧಿಯಲ್ಲಿ ಕಾಶಿನಾಥ ಮನೆಯ ಕೋಣೆಯಲ್ಲಿದ್ದ ಜಂತಿಗೆ ಸೀರೆಯನ್ನು ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸಾವಿನ ಹಿಂದಿನ ಕಾರಣದ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಕಾಶಿನಾಥನ ತಾಯಿ ರೇಣುಕಾ ಸಂತೋಷ ಲಮಾಣಿ ನೀಡಿದ ದೂರಿನ ಮೇರೆಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 008/2026ರಡಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಕೈಗೊಂಡಿದ್ದಾರೆ.

 

 

Please Share: