ಕರಾವಳಿ ವಾಯ್ಸ್ ನ್ಯೂಸ್
ಶಿರಸಿ: ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪರಾರಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದ ವಸಂತ ಹನುಮಂತ ಕಮಾಟಿ ಹಾಗೂ ಅಣ್ಣಪ್ಪ ಮೇದಾರ ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಲಕಿಗೆ ಆಮಿಷ ತೋರಿಸಿ, ನಂಬಿಕೆ ಮೂಡಿಸಿ, ಬಳಿಕ ಅವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ. ಘಟನೆ ಬಳಿಕ ಇಬ್ಬರೂ ಊರು ಬಿಟ್ಟು ಪರಾರಿಯಾಗಿದ್ದರು.
ಈ ಕುರಿತು ಬಾಲಕಿಯ ತಾಯಿ ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಕರಣದ ಗಂಭೀರತೆಯನ್ನು ಮನಗಂಡು, ವಿಶೇಷ ತಂಡ ರಚಿಸಿದ ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿ, ಯಶಸ್ವಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ. ಪ್ರಕರಣವು ದಾಖಲಾಗಿದ್ದು, ತನಿಖೆಯನ್ನು ಸೂಕ್ಷ್ಮವಾಗಿ ಮುಂದುವರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
