ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ತಾಲೂಕಿನ ಮುದಗಾ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ (ಟೆಂಪೊ ಟ್ರಾವೆಲರ್) ವಾಹನವು ಪ್ರಯಾಣಿಕರ ತಂಗುದಾಣಕ್ಕೆ ಡಿಕ್ಕಿ ಹೊಡೆದು, ಬಳಿಕ ಫ್ಲೈಓವರ್ ಗೋಡೆಗೆ ಅಪ್ಪಳಿಸಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ಸೋಮವಾರ ನಡೆದಿದೆ.
ಅಪಘಾತದ ವೇಳೆ ಟಿಟಿ ವಾಹನದಲ್ಲಿ ಒಟ್ಟು 15 ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸ್ ಸಹಕಾರದಿಂದ ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಮುಂಭಾಗದ ಭಾಗಕ್ಕೆ ತೀವ್ರ ಹಾನಿಯಾಗಿದೆ. ಅಪಘಾತದ ತೀವ್ರತೆಯನ್ನು ಕಂಡು ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಅದೃಷ್ಟವಶಾತ್ ಅಪಘಾತ ಸಂಭವಿಸಿದ ಸಮಯದಲ್ಲಿ ಪ್ರಯಾಣಿಕರ ತಂಗುದಾಣದಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ತಂಗುದಾಣದಲ್ಲಿ ಪ್ರಯಾಣಿಕರು ಇದ್ದಿದ್ದರೆ ದೊಡ್ಡ ಪ್ರಮಾಣದ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣ ಚಾಲಕನ ನಿಯಂತ್ರಣ ತಪ್ಪಿರುವುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಟಿಟಿ ವಾಹನವು ಹೊಸಪೇಟೆಯಿಂದ ಗೋವಾ ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ಪ್ರಯಾಣಿಕರದ್ದಾಗಿದ್ದು, ಅಪಘಾತದ ವೇಳೆ ಹೆಚ್ಚಿನ ವೇಗದಲ್ಲಿತ್ತು ಎಂಬ ಶಂಕೆಯೂ ವ್ಯಕ್ತವಾಗಿದೆ.
ಘಟನೆಯ ಕುರಿತು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಗಳ ಬಗ್ಗೆ ಮುಂದಿನ ತನಿಖೆ ನಡೆಯುತ್ತಿದೆ.
