ಕರಾವಳಿ ವಾಯ್ಸ್ ನ್ಯೂಸ್

ಕುಮಟಾ: ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಪುಣ್ಯಕ್ಷೇತ್ರವಾದ ಗೋಕರ್ಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ವಿದೇಶಿ ಪ್ರವಾಸಿಗನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Banner Ad

ಬಂಧಿತ ಆರೋಪಿಯನ್ನು ಅರ್ಜೆಂಟೀನಾ ದೇಶದ ಪ್ರಜೆ ಸ್ಯಾಂಟಿಯಾಗೊ ಆಸ್ಕರ್ ಲ್ಯೂಕ್ ಮೆರ್ಲೊ (21) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಕುಮಟಾ ತಾಲೂಕಿನ ಗೋಕರ್ಣದ ಭೀಮಕೊಂಡ ಪ್ರದೇಶದಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ.

ಘಟನೆಯ ವಿವರ ಪ್ರಕಾರ, ಸೋಮವಾರ ಮಧ್ಯಾಹ್ನ ಸುಮಾರು 2:30ರ ಸುಮಾರಿಗೆ ಗೋಕರ್ಣ ಪೊಲೀಸ್ ಠಾಣೆಯ ಪಿಎಸ್‌ಐ ಅನೀಲ್ ಬಿ.ಎಂ. ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಕೋಟಿತೀರ್ಥ ಕಟ್ಟೆಯ ಸಮೀಪವಿರುವ ಕಾಳಿಕಾಂಬಾ ಕಮಟೇಶ್ವರ ದೇವಸ್ಥಾನದ ಮುಂದಿನ ಸಾರ್ವಜನಿಕ ರಸ್ತೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಆರೋಪಿಯು ಮಾದಕ ವಸ್ತು ಸೇವಿಸಿದಂತೆ ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ತಕ್ಷಣವೇ ಪೊಲೀಸರು ಆತನನ್ನು ಗೋಕರ್ಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಾಧಿಕಾರಿಗಳು ನಡೆಸಿದ ಮೂತ್ರ ಪರೀಕ್ಷೆಯಲ್ಲಿ ಗಾಂಜಾ ಅಥವಾ ಇತರ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Please Share: