ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ಪ್ರದೇಶವಾಗಿರುವ ಸಿಂಗಳೀಕ ಅಭಯಾರಣ್ಯ ಹಾಗೂ ಅದರ ಪರಿಸರ ಸೂಕ್ಷ್ಮ ವಲಯದಲ್ಲಿ ಉದ್ದೇಶಿತ ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಕೈಗೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.

ಮುಂದಿನ ಆದೇಶದವರೆಗೆ ಅಭಯಾರಣ್ಯದೊಳಗೆ ಯಾವುದೇ ಅಭಿವೃದ್ಧಿ ಅಥವಾ ಯೋಜನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಮುಂದುವರಿಸಬಾರದು ಎಂದು ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ಗಂಭೀರ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ತಾತ್ಕಾಲಿಕ ತಡೆ ನೀಡಲಾಗಿದೆ.

ಪರಿಸರ ಹೋರಾಟಗಾರರಾದ ಅಖಿಲೇಶ್ ಚಿಪ್ಲಿ, ರವೀಂದ್ರನಾಥ ಶಾನಭಾಗ್ ಮತ್ತು ಮನೋಹರಕುಮಾರ ಸಿ.ಬಿ. ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ಈ ಮಧ್ಯಂತರ ಆದೇಶ ಹೊರಬಿದ್ದಿದೆ. ಈ ಬೃಹತ್ ಜಲವಿದ್ಯುತ್ ಯೋಜನೆಗಾಗಿ ಒಟ್ಟು 142.763 ಹೆಕ್ಟೇರ್ ಭೂಮಿ ಅಗತ್ಯವಿದ್ದು, ಅದರಲ್ಲಿ ಸುಮಾರು 103 ಹೆಕ್ಟೇರ್ ಪ್ರದೇಶ ನೇರವಾಗಿ ಶರಾವತಿ ಕಣಿವೆ ಅಭಯಾರಣ್ಯದ ಒಳಗೇ ಬರುತ್ತದೆ. ಉಳಿದ 39.715 ಹೆಕ್ಟೇರ್ ಪ್ರದೇಶ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಬಿ.ವಿ. ವಿದ್ಯುಲ್ಲತಾ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಭಯಾರಣ್ಯದೊಳಗೆ ವನ್ಯಜೀವಿಗಳ ಸಂರಕ್ಷಣೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದೆ ಎಂದು ನ್ಯಾಯಾಲಯದ ಗಮನ ಸೆಳೆದರು. ಆದರೆ, ಈ ಯೋಜನೆಯಡಿ ಬಂಡೆ ಸ್ಫೋಟ, ಸುರಂಗ ಕೊರೆಯುವಿಕೆ ಹಾಗೂ ತ್ಯಾಜ್ಯ ವಿಸರ್ಜನೆ ನಡೆಯುವುದರಿಂದ ಅಪರೂಪದ ವನ್ಯಜೀವಿಗಳ ಆವಾಸಸ್ಥಾನಕ್ಕೆ ಗಂಭೀರ ಹಾನಿಯಾಗುವ ಸಾಧ್ಯತೆ ಇದೆ ಎಂದು ಅವರು ವಾದಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ ಕಾಮತ್ ಅವರು, ಈ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಇನ್ನೂ ಅಂತಿಮ ಅನುಮೋದನೆ ದೊರೆತಿಲ್ಲ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಯೋಜನೆ ಕುರಿತು ಕೆಲವು ಗಂಭೀರ ಕಳವಳಗಳಿದ್ದು ಅವುಗಳ ಪರಿಶೀಲನೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ ಅವರು ಯೋಜನೆಗೆ ಮಧ್ಯಂತರ ತಡೆ ನೀಡಬಾರದು ಎಂದು ಮನವಿ ಮಾಡಿದರೂ, ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು ಪರಿಸರದ ಮೇಲೆ ಸಂಭವಿಸಬಹುದಾದ ದುಷ್ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿತು.

ಈ ಹಿನ್ನೆಲೆಯಲ್ಲಿ, ವಿಷಯದ ಕುರಿತು ಹೆಚ್ಚಿನ ಪರಿಶೀಲನೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಮುಂದಿನ ಆದೇಶದವರೆಗೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಲಾಗಿದೆ.

Please Share: