ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ರವಿವಾರ ಸಂಜೆ ಹೊನ್ನಾವರ ಸಮೀಪದ ಹೆರಂಗಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಒಮಿನಿ ವಾಹನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಒಮಿನಿ ಚಾಲಕ ಮೃತಪಟ್ಟ ಘಟನೆ ನಡೆದಿದೆ.

Banner Ad

ಮಾಹಿತಿಯಂತೆ, ಸಿದ್ದಾಪುರ ಮೂಲದ ಚಾಲಕನು ಭಟ್ಕಳದಿಂದ ಸಿದ್ದಾಪುರದತ್ತ ಒಮಿನಿ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಗೇರುಸೊಪ್ಪದಿಂದ ಹೊನ್ನಾವರ ಕಡೆಗೆ ವಾಪಸ್ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನೊಂದಿಗೆ ಹೆರಂಗಡಿ ಸಮೀಪ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಒಮಿನಿ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

ಗಂಭೀರವಾಗಿ ಗಾಯಗೊಂಡ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪಘಾತದ ವೇಳೆ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರವನ್ನು ಸುಗಮಗೊಳಿಸಿದರು.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

 

Please Share: