ಕರಾವಳಿ ವಾಯ್ಸ್ ನ್ಯೂಸ್
ದಾಂಡೇಲಿ, ಏ.27: ತಾಲೂಕಿನ ಜನತಾ ಕಾಲೋನಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರ ಮೂಲದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಕೋಲಾರದಿಂದ ದಾಂಡೇಲಿಗೆ ಪ್ರವಾಸಕ್ಕೆ ಬಂದಿದ್ದ ನಾಲ್ವರು ಸ್ನೇಹಿತರ ತಂಡವು ಭಾನುವಾರ ರಾತ್ರಿ ಸುಮಾರು 10:30ರ ಹೊತ್ತಿಗೆ ತಮ್ಮೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಜೋಯಿಡಾ–ದಾಂಡೇಲಿ ರಸ್ತೆಯ ಪಣಸೋಲಿ ಕ್ರಾಸ್ ಬಳಿ ಕಾರು ಅತಿವೇಗದಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೃಹತ್ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಚ್ಚುನೂರಾಗಿದ್ದು, ಮರಕ್ಕೂ ಹಾನಿಯಾಗಿದೆ.
ಅಪಘಾತದಲ್ಲಿ ವಿಷ್ಣುವರ್ಧನ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಸಂದೀಪ್ ರೆಡ್ಡಿ ಹಾಗೂ ಶ್ರೀಧರ್ ರೆಡ್ಡಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ತಕ್ಷಣ ದಾಂಡೇಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ವಿಷ್ಣುವರ್ಧನರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಜಗದೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣವೆಂದು ಶಂಕಿಸಲಾಗಿದ್ದು, ದಾಂಡೇಲಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
