ಕರಾವಳಿ ವಾಯ್ಸ್ ನ್ಯೂಸ್ 

ಹಾವೇರಿ, ಮೇ 5: ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪಲ್ಲಕ್ಕಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ದಹನವಾದ ಘಟನೆ ನಡೆದಿದೆ.

ಬೆಂಗಳೂರಿನಿಂದ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಸುಮಾರು 17 ಮಂದಿ ಪ್ರಯಾಣಿಕರು ಇದ್ದರು. ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಬಸ್ ಸಂಚರಿಸುತ್ತಿದ್ದಾಗ ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಘಟನೆಯನ್ನು ತಕ್ಷಣ ಗಮನಿಸಿದ ಚಾಲಕ ಪಕ್ಕೀರಪ್ಪ ಅವರು ಅಪಾಯವನ್ನು ಅರ್ಥಮಾಡಿಕೊಂಡು ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿ, ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಇದರಿಂದ ಸಂಭವಿಸಬಹುದಾದ ಭಾರಿ ದುರಂತ ತಪ್ಪಿದಂತಾಗಿದೆ.

ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಈ ಘಟನೆಯಿಂದ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ಭೇಟಿ ನೀಡಿದ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಪರಿಶೀಲನೆ ನಡೆಸಿ, ಬೆಂಕಿ ಕಾಣಿಸಿಕೊಳ್ಳಲು ಕಾರಣವಾದ ತಾಂತ್ರಿಕ ದೋಷದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

 

Please Share: