ಕರಾವಳಿ ವಾಯ್ಸ್ ನ್ಯೂಸ್
ಜೊಯಿಡಾ: ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯ ರಾಮನಗರ–ಅನಮೋಡ ರಸ್ತೆಯ ಗವೇಗಾಳಿ ಕ್ರಾಸ್ ಬಳಿ ಬುಧವಾರ ಮಧ್ಯರಾತ್ರಿ ಕಾರು ಹಾಗೂ ಟೆಂಪೊ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದಿಂದ ಕರ್ನಾಟಕದತ್ತ ಬರುತ್ತಿದ್ದ ಆಂಧ್ರ ಪ್ರದೇಶ ನೋಂದಣಿಯ ಕಾರು, ಗೋವಾಕ್ಕೆ ಬ್ರಾಯ್ಲರ್ ಕೋಳಿಗಳನ್ನು ಸಾಗಿಸುತ್ತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದ ಆಂಧ್ರ ಪ್ರದೇಶದ ಆನಂದನಗರ ನಿವಾಸಿಗಳಾದ ಮಹೇಶ್ ಹಾಗೂ ಮುರಳಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲ್ಲಪ್ಪ ಮಾದಾರ, ದ್ರಾಕ್ಷಾಣಿ ಮಾದಾರ ಮತ್ತು ಶೇಖ್ ವಾಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
