ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ಬಳ್ಳಾರಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಬಸ್ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ.
ಯಲ್ಲಾಪುರ–ಅಂಕೋಲಾ ಮಧ್ಯೆ ಅಡ್ಲೂರು ಕಂಚಿನ ಬಾಗಿಲು ಸಮೀಪ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 36 ಪ್ರಯಾಣಿಕರಿದ್ದು, ಅಪಘಾತದ ತೀವ್ರತೆಗೆ ಹಲವರು ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡ 6 ಮಂದಿಯನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಅಂಕೋಲಾ ಹಾಗೂ ಕಾರವಾರ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ ಮೂಲದ ಮೊಹಮದ್ ಇಲಿಯಾಸ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಅಪಘಾತದ ಬಳಿಕ ಬಸ್ ರಾಷ್ಟ್ರೀಯ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಾಹಿತಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
