ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ತಾಲೂಕಿನ ಕಿನ್ನರದ ನಿರಾಕರ ದೇವಸ್ಥಾನ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯೊಳಗೆ ನಿದ್ರಿಸುತ್ತಿದ್ದ ಕುಟುಂಬದವರು ಅಪಾಯದಿಂದ ಪಾರಾದ ಘಟನೆ ನಡೆದಿದೆ.

ಮುರಳಿಧರ ಸುಬ್ರಾಯ ರಾಣೆ ಹಾಗೂ ದೀಲಿಪ್ ಸುಬ್ರಾಯ ರಾಣೆ ಅವರಿಗೆ ಸಂಬಂಧಿಸಿದ ಮನೆಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಸಂಭವಿಸಿದ ವೇಳೆ ಮನೆಯೊಳಗಿನ ಕುಟುಂಬದ ಸದಸ್ಯರು ಸುಖ ನಿದ್ರೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಮನೆಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಬೊಬ್ಬೆ ಹೊಡೆದು ಮನೆಯವರನ್ನು ಎಚ್ಚರಿಸಿದ್ದಾರೆ. ಜನರ ಕೂಗಾಟ ಕೇಳಿ ಮನೆಯವರು ತಕ್ಷಣ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟರೊಳಗೆ ಮನೆ ಬಹುತೇಕ ಸುಟ್ಟು ಕರಕಲಾಗಿತ್ತು.

ಅಗ್ನಿ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸದಿರುವುದು ಸ್ಥಳೀಯರಲ್ಲಿ ನಿಟ್ಟುಸಿರು ಮೂಡಿಸಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ.

ಸಂತ್ರಸ್ತ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಸಮಾಜ ಸೇವಕ ಜ್ಞಾನೇಶ್ವರ ಕೊಳಂಬಕರ ಆಗ್ರಹಿಸಿದ್ದಾರೆ.

Please Share: