ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ರಾಜ್ಯದ ಕರಾವಳಿ ಭಾಗಗಳಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ (IMD) ಜೂನ್ 8 ಹಾಗೂ 9ರಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವೆಡೆ 204.5 ಮಿಮೀ ಗಿಂತಲೂ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಮುದ್ರ ತೀರ ಪ್ರದೇಶಗಳು, ನದಿ ತೀರಗಳು ಹಾಗೂ ಗುಡ್ಡ ಕುಸಿತ ಸಂಭವಿಸಬಹುದಾದ ಪ್ರದೇಶಗಳ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ತಿಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ, ಘಾಟ್ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಹನ ಸಂಚಾರದ ವೇಳೆ ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ತುರ್ತು ನೆರವು ವ್ಯವಸ್ಥೆ ಸಜ್ಜುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ವಿದ್ಯುತ್ ವ್ಯತ್ಯಯ, ಮರ ಉರುಳುವಿಕೆ, ರಸ್ತೆಗಳಿಗೆ ಹಾನಿ ಹಾಗೂ ನೀರು ನುಗ್ಗುವಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅನಗತ್ಯ ಪ್ರಯಾಣ ತಪ್ಪಿಸಿ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಮನವಿ ಮಾಡಲಾಗಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ನದಿ, ಸಮುದ್ರ ತೀರ ಪ್ರದೇಶಗಳಿಗೆ ತೆರಳುವವರು ವಿಶೇಷ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. IMD ಹಾಗೂ ಜಿಲ್ಲಾಡಳಿತದಿಂದ ನೀಡಲಾಗುವ ಮುಂದಿನ ಹವಾಮಾನ ಮಾಹಿತಿ ಮತ್ತು ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

 

Please Share: