ಕರಾವಳಿ ವಾಯ್ಸ್ ನ್ಯೂಸ್ 

ಜೊಯಿಡಾ: ಕಾಳಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೋಂಡೇಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಪುನುಗು ಬೆಕ್ಕು ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.

Banner Ad

ಖಚಿತ ಮಾಹಿತಿ ಮೇರೆಗೆ ಸೋಮವಾರ ಮುಂಜಾನೆ ಡಿಗ್ಗಿ ಶಾಖೆ ವ್ಯಾಪ್ತಿಯ ಬೋಂಡೇಲಿ ಮಜರೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಬೇಟೆಯಾಡಿದ ಕಾಡು ಪ್ರಾಣಿಯ ಮಾಂಸವನ್ನು ಕತ್ತರಿಸುತ್ತಿದ್ದ ತಂಡವನ್ನು ಪತ್ತೆಹಚ್ಚಿದರು. ಕಾರ್ಯಾಚರಣೆಯಲ್ಲಿ ಒಂದು ಸತ್ತ ಪುನುಗು ಬೆಕ್ಕು ಹಾಗೂ ಸುಮಾರು 4 ಕೆ.ಜಿ. ಕಾಡು ಪ್ರಾಣಿಯ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ವಾಸ್ಕೋ ನಿವಾಸಿ ಜಯೇಂದ್ರ ದಿಗಂಬರ ಗಾವಂಡೆ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪ್ರಕರಣದ ತನಿಖೆಯ ಭಾಗವಾಗಿ ವಿಧಿ-ವಿಜ್ಞಾನ ತಜ್ಞರು ಹಾಗೂ ಶ್ವಾನದಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಿದೆ. ಬೇಟೆ ಕೃತ್ಯದಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಶೋಧ ಕಾರ್ಯ ಮುಂದುವರಿಸಿದೆ.

ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ನೀಲೇಶ ಸಿಂಧೆ ದೇವೋಬಾ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಸಂಕ್ರಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

 

Please Share: