ಕರಾವಳಿ ವಾಯ್ಸ್ ನ್ಯೂಸ್
ಮುಂಡಗೋಡ: ತಾಲೂಕಿನಲ್ಲಿ ಮಂಗಳವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಲಂಚ ಪಡೆಯುತ್ತಿದ್ದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.
ಹೆಸ್ಕಾಂನ ಸಹಾಯಕ ಇಂಜಿನಿಯರ್ ಧರ್ಮರಾಜ್ ಬೆಡಸಗಾಂವ್ ಅವರು ಗುತ್ತಿಗೆದಾರ ಶಿವಯೋಗಿ ಕೂಡಲಮಠ ಅವರಿಂದ ₹65,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಕಾಮಗಾರಿ ಸಂಬಂಧಿತ ಪ್ರಕ್ರಿಯೆಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಮುಂಡಗೋಡು ಕಂದಾಯ ನಿರೀಕ್ಷಕ ಬಸವರಾಜ್ ಬಿಸ್ನಾಳ ಅವರು ಫಾರ್ಮ್ ಹೌಸ್ ಪರವಾನಗಿ ಮಂಜೂರಾತಿಗೆ ಸಂಬಂಧಿಸಿದಂತೆ ನಾರಾಯಣ ಅರೆಜೋಗಿ ಅವರಿಂದ ₹15,000 ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾರಾಯಣ ಅರೆಜೋಗಿ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕಾರವಾರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಎಸ್ಪಿ) ಕುಮಾರಚಂದ್ರ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಧಾರವಾಡ ಹಾಗೂ ಕಾರವಾರದ ಡಿವೈಎಸ್ಪಿಗಳ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.
ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
