ಕರಾವಳಿ ವಾಯ್ಸ್ ನ್ಯೂಸ್ 

ಹಳಿಯಾಳ: ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ವಾಹನ ಮಾಲೀಕರಲ್ಲಿ ಆತಂಕ ಮೂಡಿಸಿದೆ.

ಭಾನುವಾರ ಬೆಳಗಿನ ಜಾವ ಮೋತಿಕೆರೆ ರಸ್ತೆಯಲ್ಲಿರುವ ಅಂಗಡಿ ಮುಂಭಾಗ ನಿಲ್ಲಿಸಲಾಗಿದ್ದ ಸ್ಪ್ಲೆಂಡರ್ ಬೈಕ್‌ನಿಂದ ದುಷ್ಕರ್ಮಿಯೊಬ್ಬ ಸುಮಾರು 5 ರಿಂದ 6 ಲೀಟರ್ ಪೆಟ್ರೋಲ್ ಕಳವು ಮಾಡಿದ್ದಾನೆ. ಈ ಕೃತ್ಯದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿಸಿಟಿವಿ ದೃಶ್ಯದಲ್ಲಿ ಶಂಕಿತ ವ್ಯಕ್ತಿಯೊಬ್ಬ ಬೈಕ್ ಬಳಿ ಬಂದು ಪೆಟ್ರೋಲ್ ಕಳವು ಮಾಡುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೈಕ್ ಮಾಲೀಕರಾದ ಉದಯ್ ಎನ್. ಮೊಳೆ ಅವರು, ಪೆಟ್ರೋಲ್ ಕಳ್ಳತನದಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಸ್ಥಳೀಯರು ತಮ್ಮ ವಾಹನಗಳನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸಿ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರು ಸೂಚನೆ ನೀಡಬೇಕೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

 

Please Share: