ಕರಾವಳಿ ವಾಯ್ಸ್ ನ್ಯೂಸ್
ಮುಂಡಗೋಡ: ತಾಲೂಕಿನ ಜೋಗೇಶ್ವರ ಹಳ್ಳದ ಗೌಳಿ ದಡ್ಡಿಯಲ್ಲಿ ವಿದ್ಯುತ್ ಪ್ರವಹಿಸಿದ ತಂತಿ ತಗುಲಿ 26 ವರ್ಷದ ಯುವಕನೊಬ್ಬ ಮೃತಪಟ್ಟ ದುರ್ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಮೃತರನ್ನು ಜೋಗೇಶ್ವರ ಗೌಳಿ ದಡ್ಡಿಯ ನಿವಾಸಿ ಜಾನು ಕೊಕರೆ (26) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಗ್ರಾಮದ ದೇವಸ್ಥಾನದಲ್ಲಿ ನಿತ್ಯ ಪೂಜೆ ಸಲ್ಲಿಸುತ್ತಿದ್ದ ಜಾನು ಅವರು ಸೋಮವಾರ ನಡೆಯಲಿದ್ದ ಹುಣ್ಣಿಮೆ ಪೂಜೆಗೆ ಹೂವು ಸಂಗ್ರಹಿಸಲು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಸಮೀಪಕ್ಕೆ ತೆರಳಿದ್ದರು. ಈ ವೇಳೆ ವಿದ್ಯುತ್ ಹರಿದಿದ್ದ ತಂತಿಯ ಸಂಪರ್ಕಕ್ಕೆ ಬಂದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ನಂತರ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆಯ ಬಳಿಕ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಶಾಲೆಯ ಪಕ್ಕದಲ್ಲಿರುವ ವಿದ್ಯುತ್ ಪರಿವರ್ತಕ (ಟಿಸಿ) ಸಮೀಪದ ತಂತಿ ಬೇಲಿಗೆ ತಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವಿಶೇಷವಾಗಿ ಶಾಲಾ ಮಕ್ಕಳ ಸಂಚಾರ ಹೆಚ್ಚಿರುವ ಪ್ರದೇಶದಲ್ಲಿ ಈ ರೀತಿಯ ನಿರ್ಲಕ್ಷ್ಯ ಕಂಡುಬಂದಿರುವುದು ಕಳವಳಕ್ಕೆ ಕಾರಣವಾಗಿದೆ. ಶಾಲಾ ಸಮಯದಲ್ಲಿ ಇದೇ ಅವಘಡ ಸಂಭವಿಸಿದ್ದರೆ ಮತ್ತಷ್ಟು ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.
ವಿದ್ಯುತ್ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾದ ತಂತಿಗಳನ್ನು ದುರಸ್ತಿಗೊಳಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
