ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜವಿರೋಧಿ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಯ ಭಾಗವಾಗಿ ಇಬ್ಬರು ರೌಡಿಶೀಟರ್ಗಳನ್ನು ಆರು ತಿಂಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಮುಂಡಗೋಡ ಮೂಲದ ರೌಡಿಶೀಟರ್ಗಳಾದ ಮಂಜು ನವಲೆ ಹಾಗೂ ಮಧು ಸಿಂಗ್ ವಿರುದ್ಧ ಕೊಲೆ ಹಾಗೂ ಮೀಟರ್ ಬಡ್ಡಿ ವ್ಯವಹಾರ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಹೊರಡಿಸಿರುವ ಆದೇಶದಂತೆ, ಮಂಜು ನವಲೆ ಅವರನ್ನು ಆರು ತಿಂಗಳ ಅವಧಿಗೆ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರದೇಶಕ್ಕೆ ಹಾಗೂ ಮಧು ಸಿಂಗ್ ಅವರನ್ನು ಮಂಡ್ಯ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ, ಬೆದರಿಕೆ ಹಾಗೂ ಸಮಾಜವಿರೋಧಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಮುಂದುವರಿಸಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
