ಕರಾವಳಿ ವಾಯ್ಸ್ ನ್ಯೂಸ್ 

ಹಳಿಯಾಳ, ಜು. 1: ಹಳಿಯಾಳ ಪಟ್ಟಣದಲ್ಲಿ ನಡೆದ ಮೂರು ಮೋಟಾರ್‌ಸೈಕಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಅಂತರ್‌ಜಿಲ್ಲಾ ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ ಮೂರು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 25ರಂದು ಹಳಿಯಾಳದ ಬಾಲಾಜಿ ವೈನ್ ಶಾಪ್ ಸಮೀಪ ನಿಲ್ಲಿಸಲಾಗಿದ್ದ ಕೆಎ-31 ಯು-3585 ಸಂಖ್ಯೆಯ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿತ್ತು.

ಪ್ರಕರಣದ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಹಾಗೂ ಖಚಿತ ಮಾಹಿತಿಯ ಆಧಾರದ ಮೇಲೆ ಜೂನ್ 30ರಂದು ಬೆಳಗಾವಿಯ ಶಹಾಪುರ ನಿವಾಸಿ ಸರ್ವೇಶ್ ಶಿವಲಿಂಗಯ್ಯ ಮಠಪತಿ ಎಂಬಾತನನ್ನು ಹಳಿಯಾಳದಲ್ಲಿ ಬಂಧಿಸಿ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಹಳಿಯಾಳ ಪೊಲೀಸ್ ಠಾಣೆಯ ಮೂರು ಪ್ರತ್ಯೇಕ ಬೈಕ್ ಕಳ್ಳತನ ಪ್ರಕರಣಗಳಲ್ಲಿ ತಾನೇ ಕಳ್ಳತನ ನಡೆಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನಿಂದ ಮೂರು ಮೋಟಾರ್‌ಸೈಕಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ದಾಂಡೇಲಿ ಉಪವಿಭಾಗದ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಹಳಿಯಾಳ ಪೊಲೀಸ್ ಠಾಣೆಯ ಸಿಪಿಐ ನೇತೃತ್ವದ ವಿಶೇಷ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

 

 

Please Share: