ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್‌ವೊಂದು ಪಲ್ಟಿಯಾಗಿ ಮರಕ್ಕೆ ಅಡ್ಡವಾಗಿ ನಿಂತ ಘಟನೆ ತಾಲೂಕಿನ ಅವರ್ಸಾದ ಕವಲಗದ್ದ ಸೇತುವೆ ಸಮೀಪ ಗುರುವಾರ ಬೆಳಿಗ್ಗೆ ಸುಮಾರು 10.30ಕ್ಕೆ ನಡೆದಿದೆ.
ಅಂಕೋಲಾ ಕಡೆಯಿಂದ ಕಾರವಾರದತ್ತ ತೆರಳುತ್ತಿದ್ದ ಖಾಸಗಿ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಬಳಿ ಪಲ್ಟಿಯಾಗಿದೆ. ಪಲ್ಟಿಯಾದ ಬಸ್ ರಸ್ತೆ ಬದಿಯಲ್ಲಿದ್ದ ಮರಕ್ಕೆ ಅಡ್ಡವಾಗಿ ನಿಂತಿದ್ದು, ಮರ ಇರದಿದ್ದರೆ ಬಸ್ ಮತ್ತಷ್ಟು ಉರುಳಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಂಬುಲೆನ್ಸ್ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣದ ಕುರಿತು ತನಿಖೆ ಕೈಗೊಂಡಿದ್ದಾರೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತು.
