ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಗೆ ಉರುಳಿ ಅಪಘಾತಕ್ಕೀಡಾದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬೆಳಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಅಂಕೋಲಾದಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಉರುಳಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಇದೇ ವೇಳೆ, ಅಪಘಾತ ಸಂಭವಿಸಿದ ಪ್ರದೇಶದಲ್ಲಿ ಐಆರ್ಬಿ ಕಂಪನಿ ರಸ್ತೆ ಕಾಮಗಾರಿ ನಡೆಸುತ್ತಿದ್ದು, ಸೂಕ್ತ ಎಚ್ಚರಿಕೆ ಫಲಕಗಳು ಹಾಗೂ ಮಾರ್ಗಸೂಚಿ ಸೂಚನಾ ಫಲಕಗಳ ಕೊರತೆಯಿಂದ ವಾಹನ ಸವಾರರಿಗೆ, ವಿಶೇಷವಾಗಿ ರಾತ್ರಿ ವೇಳೆ, ಗೊಂದಲ ಉಂಟಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಭಾಗದಲ್ಲಿ ಸಮರ್ಪಕ ಸೂಚನಾ ಫಲಕಗಳು, ಪ್ರತಿಫಲಕಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳನ್ನು ತಕ್ಷಣ ಅಳವಡಿಸಿ ಅಪಘಾತಗಳನ್ನು ತಡೆಯುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
