ಕರಾವಳಿ ವಾಯ್ಸ್ ನ್ಯೂಸ್ 

ಶಿರಸಿ: ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಗಾಂಜಾ ಮತ್ತು ಕಾರನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಬನವಾಸಿ ರಸ್ತೆಯ ಹಾರ್ಟಿಕಲ್ಚರ್ ಕಾಲೇಜು ಸಮೀಪ ಮಂಗಳವಾರರಂದು ಸಂಜೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹಾವೇರಿ ಜಿಲ್ಲೆಯ ನವನಗರ ಮೂಲದ, ಪ್ರಸ್ತುತ ದಾಸನಕೊಪ್ಪ ನಿವಾಸಿ ಇಮ್ರಾನ್ ಅಹ್ಮದ್ (29) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಸುಮಾರು 253 ಗ್ರಾಂ ಗಾಂಜಾ (ಅಂದಾಜು ₹20 ಸಾವಿರ ಮೌಲ್ಯ) ಹಾಗೂ ಕೃತ್ಯಕ್ಕೆ ಬಳಸಿದ್ದ ಹುಂಡೈ ಐ10 ಕಾರು (ಅಂದಾಜು ₹1 ಲಕ್ಷ ಮೌಲ್ಯ) ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿತನ ವಿರುದ್ಧ ಈ ಹಿಂದೆ ಮುಂಡಗೋಡ ಠಾಣೆಯಲ್ಲಿ ಎರಡು ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣಗಳು, ಅಂಕೋಲಾ ಠಾಣೆಯಲ್ಲಿ ಮನೆ ಕಳ್ಳತನ ಹಾಗೂ ಹಾನಗಲ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿವೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಶಿರಸಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

 

 

Please Share: