ಕರಾವಳಿ ವಾಯ್ಸ್ ನ್ಯೂಸ್ 

ಮುರ್ಡೇಶ್ವರ: ಶ್ರೀ ಮುರ್ಡೇಶ್ವರ ದೇವಸ್ಥಾನದ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳನ್ನು ಸೃಷ್ಟಿಸಿ, ‘ಮುರ್ಡೇಶ್ವರ ಅದೃಷ್ಟ ಡ್ರಾ’ ಹೆಸರಿನಲ್ಲಿ ನಕಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮುರ್ಡೇಶ್ವರ ಪೊಲೀಸರು ಬಂಧಿಸಿದ್ದಾರೆ.

Banner Ad

ಆರೋಪಿ ನರಸಿಂಗ್ ವೆಂಕಟರಾವ್ ತಗರಖೇಡೆ (32), ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಸಾಲಖನಗಾಂವ ನಿವಾಸಿ. ಈತ ದೇವಸ್ಥಾನದ ಫೋಟೋಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಪ್ರಚಾರ ಪತ್ರಿಕೆಗಳನ್ನು ಸಿದ್ಧಪಡಿಸಿ, ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಎನ್ನಲಾಗಿದೆ.

ಈ ಕುರಿತು ಶ್ರೀ ಮುರ್ಡೇಶ್ವರ ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಮದನ ಶೆಟ್ಟಿ ಅವರು 2025ರ ಆಗಸ್ಟ್ 6ರಂದು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.

ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಕಳೆದ ಒಂದು ವರ್ಷದಿಂದ ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಬೀದರ ಜಿಲ್ಲೆಗಳಲ್ಲಿ ಆರೋಪಿಯ ಸುಳಿವಿಗಾಗಿ ಮಾಹಿತಿ ಸಂಗ್ರಹಿಸಲಾಗಿತ್ತು. ತಾಂತ್ರಿಕ ಮಾಹಿತಿ ಆಧರಿಸಿ ಜುಲೈ 16ರಂದು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐಗಳ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಪತ್ತೆಹಚ್ಚಿದ ತಂಡವನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

 

Please Share: