ಕರಾವಳಿ ವಾಯ್ಸ್ ನ್ಯೂಸ್ 

ಹೊನ್ನಾವರ: ತಾಲೂಕಿನ ಆರೋಳ್ಳಿ ತಿರುವಿನ ಮುಗ್ವಾ ಚರ್ಚ್ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟೆಂಪೋ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಟೆಂಪೋ ಪಲ್ಟಿಯಾಗಿ ಚಾಲಕ ಸೇರಿದಂತೆ ಕೆಲ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.

Banner Ad

ಮಾಹಿತಿಯ ಪ್ರಕಾರ, ಹಡಿನಬಾಳದಿಂದ ಹೊನ್ನಾವರದತ್ತ ಪ್ರಯಾಣಿಕರನ್ನು ಕರೆತರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎದುರಿಗೆ, ಹೊನ್ನಾವರದಿಂದ ಗೇರುಸೊಪ್ಪ ಮಾರ್ಗವಾಗಿ ತೆರಳುತ್ತಿದ್ದ ಟೆಂಪೋ ಬಂದಿದೆ. ಈ ವೇಳೆ ಟೆಂಪೋ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ರಸ್ತೆ ಮಧ್ಯೆಯೇ ಪಲ್ಟಿಯಾಗಿದೆ.

ಅಪಘಾತದಲ್ಲಿ ಬಸ್‌ನ ಎಡಭಾಗಕ್ಕೆ ಸಣ್ಣ ಪ್ರಮಾಣದ ಹಾನಿಯಾಗಿದ್ದು, ಟೆಂಪೋದ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ. ಟೆಂಪೋದಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕ ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರ ನಿಧಾನಗೊಂಡಿತ್ತು. ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸಹಜ ಸ್ಥಿತಿಗೆ ತಂದರು.

ಪ್ರಾಥಮಿಕ ತನಿಖೆಯಲ್ಲಿ ಟೆಂಪೋ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

 

Please Share: