ಕರಾವಳಿ ವಾಯ್ಸ್ ನ್ಯೂಸ್ 

ದಾಂಡೇಲಿ: ನಗರದ ನಿವಾಸಿ ಮನೆಯೊಂದರ ಮೇಲ್ಚಾವಣಿಗೆ ಬೃಹತ್ ಮರದ ಕೊಂಬೆ ಬಿದ್ದ ಪರಿಣಾಮ ಮನೆಯೊಳಗೆ ಮಲಗಿದ್ದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಘಟನೆಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನಗರದ ನಿವಾಸಿ ಬಿಬಿ ಜಹರಾ ಅವರು ಮನೆಯಲ್ಲಿ ಮಲಗಿದ್ದ ವೇಳೆ ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಮನೆಯ ಪಕ್ಕದಲ್ಲಿದ್ದ ಬೃಹತ್ ಮರದ ಕೊಂಬೆ ಮುರಿದು ಮೇಲ್ಚಾವಣಿಯ ಸೀಟನ್ನು ಒಡೆದು ಮನೆಯೊಳಗೆ ಬಿದ್ದಿದೆ. ಪರಿಣಾಮ ಅವರ ತಲೆಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಗಾಯಾಳುವಿನ ಪುತ್ರ ಮೆಹಬೂಬ್ ಕಾಕರ್, ಮನೆ ಪಕ್ಕದಲ್ಲಿರುವ ಅಪಾಯಕಾರಿ ಮರದಿಂದ ಅಪಾಯ ಸಂಭವಿಸುವ ಸಾಧ್ಯತೆ ಬಗ್ಗೆ 5–6 ತಿಂಗಳ ಹಿಂದೆಯೇ ಅರಣ್ಯ ಇಲಾಖೆಗೆ ಲಿಖಿತ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಅವರ ನಿರ್ಲಕ್ಷ್ಯದಿಂದಲೇ ಇಂದು ನನ್ನ ತಾಯಿಯ ಜೀವಕ್ಕೆ ಅಪಾಯ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಮನೆಯ ಸುತ್ತಮುತ್ತ ಇನ್ನೂ ಅಪಾಯದ ಸ್ಥಿತಿಯಲ್ಲಿರುವ ಮರಗಳು ಹಾಗೂ ತೆಂಗಿನ ಮರಗಳಿದ್ದು, ಅವುಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಕುಟುಂಬ ಸದಸ್ಯರು ಒತ್ತಾಯಿಸಿದ್ದಾರೆ. ಮನೆಯಲ್ಲಿ ಮಕ್ಕಳು ಹಾಗೂ ವಯೋವೃದ್ಧರು ವಾಸಿಸುತ್ತಿರುವುದರಿಂದ ಮತ್ತಷ್ಟು ಅನಾಹುತ ಸಂಭವಿಸುವ ಭೀತಿ ಎದುರಾಗಿದೆ ಎಂದು ತಿಳಿಸಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಅಪಾಯಕಾರಿ ಮರಗಳ ತೆರವಿಗೆ ಸಂಬಂಧಿಸಿದ ಅಧಿಕಾರಿಗಳು ವಿಳಂಬ ಮಾಡದೆ ತುರ್ತು ಕ್ರಮ ಕೈಗೊಳ್ಳಬೇಕು. ಇಂತಹ ಮರಗಳನ್ನು ಗುರುತಿಸಿ ತೆರವುಗೊಳಿಸುವ ಮೂಲಕ ಸಾರ್ವಜನಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

Please Share: