ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಮಧ್ಯದ ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡ ಘಟನೆ ನಗರದ ಕೋಡಿಭಾಗದ ಖಾಫ್ರಿ ದೇವಸ್ಥಾನದ ಸಮೀಪ ಮಂಗಳವಾರ ನಡೆದಿದೆ.
ಚಿತ್ತಾಕುಲಾ ನಿವಾಸಿ ಪ್ರತೀಕ್ ಕಲ್ಗುಟ್ಕರ್ ಅವರು ಕಾರಿನಲ್ಲಿ ಇತರ ಇಬ್ಬರೊಂದಿಗೆ ಕಾರವಾರದಿಂದ ಚಿತ್ತಾಕುಲಾ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದಲ್ಲಿದ್ದ ಡಿವೈಡರ್ಗೆ ಬಲವಾಗಿ ಅಪ್ಪಳಿಸಿದೆ.
ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಡಿವೈಡರ್ಗೂ ಹಾನಿಯಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರವಾರ ನಗರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
