ಕರಾವಳಿ ವಾಯ್ಸ್ ನ್ಯೂಸ್ 

ಕಾರವಾರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಬಾರಿ ಉತ್ತರಕನ್ನಡ ಜಿಲ್ಲೆಗೆ ಸಚಿವ ಸ್ಥಾನ ದೊರೆಯದಿರುವುದು ಜಿಲ್ಲೆಯ ಜನರ ನಿರೀಕ್ಷೆಗೆ ಧಕ್ಕೆ ತಂದಿರುವ ನಿರ್ಧಾರ ಎಂದು ಸಾಮಾಜಿಕ ಕಾರ್ಯಕರ್ತ ಪ್ರಸಾದ ಗಾಂವಕರ್ ಅಮದಳ್ಳಿ ಬೇಸರ ವ್ಯಕ್ತಪಡಿಸಿದ್ದಾರೆ.

ಗುರುವಾರ ಪ್ರಕಟಣೆ ನೀಡಿದ ಅವರು, ಉತ್ತರಕನ್ನಡ ಜಿಲ್ಲೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಹತ್ವದ ಹಲವು ಯೋಜನೆಗಳಿಗೆ ಕೇಂದ್ರಬಿಂದುವಾಗಿದ್ದು, ಇನ್ನೂ ಅನೇಕ ಮಹತ್ವಾಕಾಂಕ್ಷಿ ಯೋಜನೆಗಳು ಜಾರಿಯಾಗುವ ಹಂತದಲ್ಲಿವೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಮಟ್ಟದಲ್ಲಿ ಜಿಲ್ಲೆಯ ಪರವಾಗಿ ಪರಿಣಾಮಕಾರಿಯಾಗಿ ಧ್ವನಿಯಾಗುವ ಸಚಿವರ ಅಗತ್ಯವಿತ್ತು. ಆದರೆ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.

ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಗೆ ಹೋಲಿಸಿದರೆ ಉತ್ತರಕನ್ನಡ ಜಿಲ್ಲೆ ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಯ ಅಗತ್ಯವಿದೆ. ಜಿಲ್ಲೆಯ ಸಮಗ್ರ ಪ್ರಗತಿಗಾಗಿ ಸರ್ಕಾರ ವಿಶೇಷ ಆದ್ಯತೆ ನೀಡಬೇಕಿದ್ದು, ಸಚಿವ ಸ್ಥಾನ ದೊರೆತಿದ್ದರೆ ಅಭಿವೃದ್ಧಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುತ್ತಿತ್ತು ಎಂಬ ವಿಶ್ವಾಸವಿತ್ತು ಎಂದು ಅವರು ತಿಳಿಸಿದ್ದಾರೆ.

ಅರಣ್ಯ, ನದಿಗಳು, ಸಮುದ್ರ ತೀರ ಸೇರಿದಂತೆ ಅಪಾರ ನೈಸರ್ಗಿಕ ಸಂಪತ್ತನ್ನು ಹೊಂದಿರುವ ರಾಜ್ಯದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಉತ್ತರಕನ್ನಡಕ್ಕೆ ಸಚಿವ ಸ್ಥಾನ ನೀಡದೇ ಇರುವುದು ಜಿಲ್ಲೆಯ ಜನರ ಆಶಾಭಾವನೆಗೆ ನಿರಾಸೆ ಉಂಟುಮಾಡಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಈ ಕೊರತೆಯನ್ನು ಸರಿಪಡಿಸಿ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಪ್ರಸಾದ ಗಾಂವಕರ್ ಆಗ್ರಹಿಸಿದ್ದಾರೆ.

 

Please Share: