ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಹೋರಿಗಳು ಗುದ್ದಾಡುವ ವೇಳೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಲ್ಲಾಪುರ ಗ್ರಾಮದ ಸುಭದ್ರ ಹೋಟೆಲ್ ಬಳಿ ಮಂಗಳವಾರ ಈ ಘಟನೆ ನಡೆದಿದ್ದು, ರಾಜೇಶ್ವರಿ (29) ಮೃತ ಮಹಿಳೆ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ರಸ್ತೆಯಲ್ಲಿ ಹೋರಿಗಳು ಪರಸ್ಪರ ಗುದ್ದಾಡುತ್ತಿದ್ದವು. ಈ ಸಂದರ್ಭ ಹೋರಿಯೊಂದು ರಾಜೇಶ್ವರಿಗೆ ಡಿಕ್ಕಿ ಹೊಡೆದಿದ್ದು, ಬಲವಾದ ಹೊಡೆತಕ್ಕೆ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಸ್ಥಳೀಯರು ಗಾಯಗೊಂಡಿದ್ದ ರಾಜೇಶ್ವರಿ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಕೆಲಸ ಮುಗಿಸಿ ಮನೆಗೆ ಸುರಕ್ಷಿತವಾಗಿ ಮರಳಬೇಕಿದ್ದ ಮಹಿಳೆ, ಹೋರಿಗಳ ಗುದ್ದಾಟದ ನಡುವೆ ಸಿಲುಕಿ ಜೀವ ಕಳೆದುಕೊಂಡಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖ ಮೂಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ಹೋರಿಗಳ ಹಾವಳಿ ನಿಯಂತ್ರಣಕ್ಕೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ಕೇಳಿಬಂದಿದೆ.
ಈ ಕುರಿತು ಮಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆ ರಾಜೇಶ್ವರಿ
