ಕರಾವಳಿ ವಾಯ್ಸ್ ನ್ಯೂಸ್ 

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಹಾಗೂ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟು ಸುಬ್ರಮಣ್ಯ ಗೌಡ (47) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಎಂ.ಎಸ್ಸಿ., ಬಿ.ಎಡ್ ಪದವೀಧರರಾಗಿದ್ದ ಸುಬ್ರಮಣ್ಯ ಗೌಡ ಅವರು ಹಾರ್ಸಿಕಟ್ಟಾ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವುದರ ಜತೆಗೆ ಕ್ರೀಡಾ ಕ್ಷೇತ್ರದಲ್ಲೂ ತಮ್ಮದೇ ಛಾಪು ಮೂಡಿಸಿದ್ದರು.

ಕ್ರಿಕೆಟ್‌ನಲ್ಲಿ ಅತ್ಯುತ್ತಮ ಆಲ್‌ರೌಂಡರ್ ಆಗಿದ್ದ ಅವರು ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಇಲಾಖಾ ಮಟ್ಟದ ಕ್ರೀಡಾಕೂಟಗಳಲ್ಲೂ ನಿರಂತರವಾಗಿ ಭಾಗವಹಿಸುತ್ತಿದ್ದ ಅವರು ಹಲವು ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಿ ಅವರನ್ನು ಬೆಳೆಸಿದ್ದರು. ‘ಕ್ರೀಡೆ ಎಂದರೆ ಸುಬ್ರಮಣ್ಯ ಗೌಡ’ ಎನ್ನುವಷ್ಟರ ಮಟ್ಟಿಗೆ ಕ್ರೀಡೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು.

ಗುರುವಾರ ರಾತ್ರಿ ಸಿದ್ದಾಪುರದ ಅಡಿಕೆ ಭವನದಲ್ಲಿ ಎಂದಿನಂತೆ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯುವ ಪ್ರಯತ್ನ ನಡೆದರೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅವರ ಅಕಾಲಿಕ ನಿಧನದ ಸುದ್ದಿ ತಾಲೂಕಿನ ಶಿಕ್ಷಣ ಹಾಗೂ ಕ್ರೀಡಾ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಸರಳ, ಕ್ರಿಯಾಶೀಲ ವ್ಯಕ್ತಿತ್ವದ ಶಿಕ್ಷಕರನ್ನು ಕಳೆದುಕೊಂಡಿರುವುದು ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಹೋದ್ಯೋಗಿಗಳು ಹಾಗೂ ಕ್ರೀಡಾಪಟುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ನಾಯಕ ಬಾವಿಕೇರಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಶಿಕ್ಷಕರು ಸಂತಾಪ ಸೂಚಿಸಿದ್ದಾರೆ.

 

 

 

Please Share: