ಕರಾವಳಿ ವಾಯ್ಸ್ ನ್ಯೂಸ್
ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರು–ಮಾದನಕಳ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿಂದಿ ಶಿಕ್ಷಕ ಅಬು ತಲಹ ಖಾದರ್ ಅವರಿಗೆ ಸದ್ಯಕ್ಕೆ ಜಾಮೀನು ದೊರೆಯದಂತಾಗಿದೆ. ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷಕ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಸುಮಾರು ಎರಡು ತಿಂಗಳ ಹಿಂದೆ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ವಿದ್ಯಾರ್ಥಿಯ ಆತ್ಮಹತ್ಯೆಗೆ ಶಾಲೆಯ ಹಿಂದಿ ಶಿಕ್ಷಕರ ಒತ್ತಡ ಹಾಗೂ ಅವರ ಬೇಜವಾಬ್ದಾರಿತನ ಕಾರಣವಾಗಿದೆ ಎಂದು ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹಿಂದಿ ಶಿಕ್ಷಕ ಅಬು ತಲಹ ಖಾದರ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗಿದ ಬಳಿಕ ಸಿದ್ದಾಪುರ ಪೊಲೀಸರು ತನಿಖೆ ನಡೆಸಿ ಅಬು ತಲಹ ಖಾದರ್ ಅವರನ್ನು ಬಂಧಿಸಿದ್ದರು. ಬಳಿಕ ಆರೋಪಿಯ ಪರವಾಗಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.
ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ನಾಶವಾಗುವ ಅಥವಾ ಅವುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಆರೋಪಿಗೆ ಜಾಮೀನು ನೀಡಬಾರದು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ ಮಳಗೀಕರ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಿದರು. ಪ್ರಕರಣದ ತನಿಖೆ ಹಾಗೂ ಸಾಕ್ಷ್ಯಗಳ ಮಹತ್ವವನ್ನು ಪರಿಗಣಿಸಿ ಆರೋಪಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂಬ ಅಂಶವನ್ನು ಪ್ರಾಸಿಕ್ಯೂಷನ್ ಪರವಾಗಿ ನ್ಯಾಯಾಲಯದ ಗಮನಕ್ಕೆ ತರಲಾಯಿತು.

ಹಿಂದಿ ಶಿಕ್ಷಕ ಅಬು ತಲಹ ಖಾದರ್
ಪ್ರಾಸಿಕ್ಯೂಷನ್ ಪರ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಅಬು ತಲಹ ಖಾದರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಿಕ್ಷಕನಿಗೆ ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಕರಣದ ತನಿಖೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳು ಮುಂದುವರಿಯಲಿವೆ.
