ಕರಾವಳಿ ವಾಯ್ಸ್ ನ್ಯೂಸ್
ಕಾರವಾರ/ಶಿರಸಿ: ಲೋಕಾಯುಕ್ತದಲ್ಲಿ ದಾಖಲಾಗಿರುವ ಸುಮೋಟೋ ಪ್ರಕರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿ ಹಾಗೂ ಸಂಸ್ಥೆಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ಭೇಟಿ ನೀಡಿ ದಾಖಲೆ ಹಾಗೂ ಕಡತಗಳನ್ನು ಪರಿಶೀಲಿಸಿದರು.
ಉತ್ತರ ಕನ್ನಡ ಲೋಕಾಯುಕ್ತ ಎಸ್‌ಪಿ ದಿನೇಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಾರವಾರ ಮತ್ತು ಶಿರಸಿ ನಗರಸಭೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ವಿವಿಧ ವಿಭಾಗಗಳಲ್ಲಿನ ಕಾರ್ಯವೈಖರಿ ಪರಿಶೀಲಿಸಿದರು.
ನಗರಸಭೆಯ ಕಂದಾಯ, ತೆರಿಗೆ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿದ ಅಧಿಕಾರಿಗಳು ದಾಖಲೆಗಳು, ಕಡತಗಳು ಹಾಗೂ ಸಾರ್ವಜನಿಕರ ಕೆಲಸಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.

ವಿವಿಧ ವಿಭಾಗಗಳಲ್ಲಿ ಬಾಕಿ ಉಳಿದಿರುವ ಕಡತಗಳ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು. ಕಡತಗಳು ಯಾವ ಕಾರಣಕ್ಕೆ ಬಾಕಿ ಉಳಿದಿವೆ, ಅವುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳು ಸೇರಿದಂತೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಯಿತು.
ಇದೇ ವೇಳೆ ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಹಾಸ್ಟೆಲ್‌ಗಳಿಗೂ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜಿಲ್ಲೆಯಲ್ಲಿರುವ ಒಂಬತ್ತು ಹಾಸ್ಟೆಲ್‌ಗಳಿಗೆ ಅಧಿಕಾರಿಗಳು ಸರ್ಪ್ರೈಸ್ ವಿಸಿಟ್ ನಡೆಸಿ ಅಲ್ಲಿನ ವ್ಯವಸ್ಥೆ, ದಾಖಲೆಗಳು ಹಾಗೂ ನಿರ್ವಹಣೆಗೆ ಸಂಬಂಧಿಸಿದ ಅಂಶಗಳನ್ನು ಪರಿಶೀಲಿಸಿದ್ದಾರೆ.
ಲೋಕಾಯುಕ್ತದಲ್ಲಿ ದಾಖಲಾಗಿರುವ ಸುಮೋಟೋ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ವಾಸ್ತವ ಸ್ಥಿತಿ ಪರಿಶೀಲಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳ ತಂಡವು ಸ್ಥಳದಲ್ಲಿನ ದಾಖಲೆಗಳನ್ನು ಪರಿಶೀಲಿಸುವುದರ ಜತೆಗೆ ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನೂ ಪಡೆದುಕೊಂಡಿದೆ.
ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಪರಿಶೀಲನೆಯ ವೇಳೆ ಸಂಗ್ರಹಿಸಿದ ಮಾಹಿತಿ, ದಾಖಲೆಗಳು ಹಾಗೂ ಕಂಡುಬಂದ ಅಂಶಗಳ ಕುರಿತು ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಸಲ್ಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
