ಕರಾವಳಿ ವಾಯ್ಸ್ ನ್ಯೂಸ್ 

ಯಲ್ಲಾಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಪ್ರವಾಸಿಗರ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.

Banner Ad

ಭಟ್ಕಳದಿಂದ ರಾಯಭಾಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಪುಣೆಯಿಂದ ಬರುತ್ತಿದ್ದ ಪ್ರವಾಸಿಗರ ಟೆಂಪೋ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟೆಂಪೋ ಚಾಲಕನ ಕಾಲು ವಾಹನದೊಳಗೆ ಸಿಲುಕಿಕೊಂಡಿತ್ತು. ಸ್ಥಳದಲ್ಲಿದ್ದವರು ಹಾಗೂ ಪೊಲೀಸರು ಪ್ರಯಾಸಪಟ್ಟು ಚಾಲಕನನ್ನು ಹೊರತೆಗೆದಿದ್ದಾರೆ.

ಅಪಘಾತದಲ್ಲಿ ಬಸ್ ಹಾಗೂ ಟೆಂಪೋದಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸಮಯಪ್ರಜ್ಞೆಯಿಂದ ವಾಹನವನ್ನು ನಿಯಂತ್ರಿಸಿದ ಪರಿಣಾಮ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.

ಅಪಘಾತದ ಹಿನ್ನೆಲೆಯಲ್ಲಿ ಅರಬೈಲ್ ಘಟ್ಟದಲ್ಲಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು. ಘಟನೆಗೆ ಸಂಬಂಧಿಸಿದಂತೆ ಟೆಂಪೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

 

Please Share: