ಕರಾವಳಿ ವಾಯ್ಸ್ ನ್ಯೂಸ್
ಭಟ್ಕಳ: ಜಾನುವಾರುಗಳನ್ನು ತಪ್ಪಿಸಲು ಹೋಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ವೊಂದು ನಿಯಂತ್ರಣ ತಪ್ಪಿ ಚರಂಡಿಗೆ ನುಗ್ಗಿದ ಘಟನೆ ನಡೆದಿದೆ. ಬಸ್ ಹೈಟೆನ್ಷನ್ ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ತಾಗುವ ಹಂತದಲ್ಲೇ ನಿಂತಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಕೆಎ 31 ಎಫ್ 1705 ನೋಂದಣಿ ಸಂಖ್ಯೆಯ ಈ ಬಸ್ ಉತ್ತರ ಕನ್ನಡ ಜಿಲ್ಲೆಯ ಸಾರಿಗೆ ಘಟಕಕ್ಕೆ ಸೇರಿದ್ದು, ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿತ್ತು. ಶಿವಮೊಗ್ಗದ ಸಾಗರದಲ್ಲಿ ನಿಸರ್ಗ ಡಾಬಾ ಬಳಿಯ ತಿರುವಿನಲ್ಲಿ ಹಠಾತ್ತಾಗಿ ಅಡ್ಡಬಂದ ಜಾನುವಾರುಗಳನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಬಸ್ ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಇಳಿದಿದೆ.
ಘಟನೆ ವೇಳೆ ಬಸ್ನಲ್ಲಿದ್ದ ಪ್ರಯಾಣಿಕರು ಗಾಬರಿಗೊಂಡಿದ್ದು, ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಯಿಂದ ಎಲ್ಲರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವಿಷಯ ತಿಳಿದು ಮೆಸ್ಕಾಂ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಪರಿಸ್ಥಿತಿ ತಿಳಿಗೊಳಿಸಿದರು.


