ಕರಾವಳಿ ವಾಯ್ಸ್ ನ್ಯೂಸ್ 

ಬಂಗಾರಮಕ್ಕಿ: ಹಿರಿಯ ಹಾಗೂ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ ಅವರಿಗೆ ಈ ವರ್ಷದ ಪ್ರತಿಷ್ಠಿತ ‘ಯಕ್ಷಾಂಜನೇಯ’ ಪ್ರಶಸ್ತಿ ಲಭಿಸಿದೆ.

Banner Ad

ದಿ. ವೇ.ಬ್ರ. ಗಣೇಶ ಭಟ್ಟರ ಸ್ಮರಣಾರ್ಥ ಶ್ರೀಕ್ಷೇತ್ರ ಬಂಗಾರಮಕ್ಕಿ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯನ್ನು ಅ.26ರ ಸೋಮವಾರ ರಾತ್ರಿ 8 ಗಂಟೆಗೆ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ಸಭಾಂಗಣದಲ್ಲಿ ಪ್ರದಾನ ಮಾಡಲಾಗುವುದು.

ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ ಅವರ ದಿವ್ಯ ಸಾನ್ನಿಧ್ಯ ಹಾಗೂ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ವಿದ್ಯಾಧರ ರಾವ್ ಜಲವಳ್ಳಿ, ಯಕ್ಷರಂಗ ಪತ್ರಿಕೆಯ ಸಂಪಾದಕ ಗೋಪಾಲಕೃಷ್ಣ ಭಾಗ್ವತ, ಕಡತೋಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ, ಮಂಕಿ ಮಂಡಲ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹಾಗೂ ಹೊನ್ನಾವರ (ಮಂಕಿ) ಮಂಡಲ ಬಿಜೆಪಿ ಅಧ್ಯಕ್ಷ ಮಂಜುನಾಥ ನಾಯ್ಕ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿರುವ ‘ಯಕ್ಷ ಪೌರ್ಣಿಮೆ–2026’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಯಕ್ಷಗಾನದ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರ ಕಲಾಸೇವೆಯನ್ನು ಗೌರವಿಸುವ ಉದ್ದೇಶದಿಂದ ಪ್ರತಿವರ್ಷ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದ ಬಳಿಕ ರಾತ್ರಿ 8.30ರಿಂದ ‘ಯಜ್ಞಾಶ್ವ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀಕ್ಷೇತ್ರ ಬಂಗಾರಮಕ್ಕಿಯ ವತಿಯಿಂದ ಆಹ್ವಾನಿಸಲಾಗಿದೆ.

 

 

Please Share: