ಕರಾವಳಿ ವಾಯ್ಸ್ ನ್ಯೂಸ್ 

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಗೆಲುವಿಗಾಗಿ ಕೆಪಿಸಿಸಿ ಶಿಕ್ಷಕರು ಹಾಗೂ ಪದವೀಧರ ಘಟಕದ ನಿಕಟಪೂರ್ವ ರಾಜ್ಯಾಧ್ಯಕ್ಷ, ಅಹಿಂದ ಮುಖಂಡ ಡಾ. ಆರ್.ಎಂ. ಕುಬೇರಪ್ಪ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಬಿರುಸುಗೊಂಡಿದೆ.

Banner Ad

ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಹಿಂದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಸಂಘಟಿಸಿರುವ ಕುಬೇರಪ್ಪ ಅವರು, ಪದವೀಧರರ ಸಮಾವೇಶಗಳಲ್ಲಿ ಪಾಲ್ಗೊಂಡು ಮೋಹನ ಲಿಂಬಿಕಾಯಿ ಪರ ಮತಯಾಚಿಸುತ್ತಿದ್ದಾರೆ. ಅಹಿಂದ ಅಭಿಮಾನಿಗಳು, ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡುವುದರ ಜತೆಗೆ ಶಿಕ್ಷಣ ಸಂಸ್ಥೆಗಳು ಹಾಗೂ ಬ್ಯಾಂಕಿಂಗ್ ವಲಯದವರನ್ನು ಸಂಪರ್ಕಿಸಿ ಬೆಂಬಲ ಕೋರಲಾಗುತ್ತಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಡಾ. ಕುಬೇರಪ್ಪ ತಿಳಿಸಿದ್ದಾರೆ.

ಕೆಪಿಸಿಸಿ ಶಿಕ್ಷಕರು ಹಾಗೂ ಪದವೀಧರ ಘಟಕದ ನಿಕಟಪೂರ್ವ ರಾಜ್ಯಾಧ್ಯಕ್ಷ, ಅಹಿಂದ ಮುಖಂಡ ಡಾ. ಆರ್.ಎಂ. ಕುಬೇರಪ್ಪ

ಮೋಹನ ಲಿಂಬಿಕಾಯಿ ಅವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದಾಗ ಪದವೀಧರರು, ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಿದ್ದಾರೆ. ಪದವೀಧರರ ಬೇಡಿಕೆಗಳಿಗೆ ಸ್ಪಂದಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದು ಅಗತ್ಯವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅತಿಥಿ ಉಪನ್ಯಾಸಕರ ಖಾಯಂ ನೇಮಕಾತಿ ಸೇರಿದಂತೆ ಪದವೀಧರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆದ್ಯತೆ ನೀಡುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಅಹಿಂದ, ದಲಿತ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಪದವೀಧರರು ತಮ್ಮ ಪ್ರಥಮ ಪ್ರಾಶಸ್ತ್ಯದ ಮತವನ್ನು ಮೋಹನ ಲಿಂಬಿಕಾಯಿ ಅವರಿಗೆ ನೀಡಿ ಭಾರಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕುಬೇರಪ್ಪ ಮನವಿ ಮಾಡಿದ್ದಾರೆ.

ಪ್ರಚಾರ ಕಾರ್ಯದಲ್ಲಿ ನೂರಾರು ಅಹಿಂದ ಕಾರ್ಯಕರ್ತರು, ಅತಿಥಿ ಉಪನ್ಯಾಸಕರು ಹಾಗೂ ಪದವೀಧರರು ಉತ್ಸಾಹದಿಂದ ತೊಡಗಿಸಿಕೊಂಡಿದ್ದಾರೆ. ಡಾ. ಆರ್.ಎಂ. ಕುಬೇರಪ್ಪ ಅವರೇ ಚುನಾವಣೆಯಲ್ಲಿ ಸ್ಪರ್ಧಿಸಿರುವಂತೆ ಕಾರ್ಯಕರ್ತರು ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Please Share: