ಕರಾವಳಿ ವಾಯ್ಸ್ ನ್ಯೂಸ್
ಕುಮಟಾ: ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೊಂಡಾ ಆಕ್ಟಿವಾ ಸ್ಕೂಟರ್ ಕಳವು ಪ್ರಕರಣವನ್ನು ಭೇದಿಸಿರುವ ಕುಮಟಾ ಪೊಲೀಸರು, ಆರೋಪಿಯನ್ನು ಬಂಧಿಸಿ ₹20 ಸಾವಿರ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಶಿರಸಿ ತಾಲೂಕಿನ ಜಡ್ಡಿಗದ್ದೆ, ಕೊಡ್ಲಗದ್ದೆ ನಿವಾಸಿ ಮಹಮ್ಮದ್ ಆಸೀದ್ (21) ಬಂಧಿತ ಆರೋಪಿ. ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನವರಾದ ಕೆಎಸ್‌ಆರ್‌ಟಿಸಿ ನಿರ್ವಾಹಕ ಶಿವಮೂರ್ತಿ ಎನ್.ಎಸ್. ಅವರಿಗೆ ಸೇರಿದ ಹೊಂಡಾ ಆಕ್ಟಿವಾ ಸ್ಕೂಟರ್ (KA-12/S-1847) ಅ. 20ರಂದು ರಾತ್ರಿ 9.15ರ ಸುಮಾರಿಗೆ ಕುಮಟಾ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದಾಗ ಕಳವಾಗಿತ್ತು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಭಟ್ಕಳ ಉಪವಿಭಾಗದ ಡಿವೈಎಸ್ಪಿ ಗಿರೀಶ್ ಎಸ್.ವಿ. ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಕುಸುಮಾಧರ ಕೆ. ನೇತೃತ್ವದಲ್ಲಿ ಪಿಎಸ್‌ಐ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಇಲಾಖೆ ಶ್ಲಾಘಿಸಿದೆ.


