
ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಸಾಗಿಸುತ್ತಿರುವ ಬೃಹತ್ ಯಂತ್ರದ ಸಾಗಣೆ ಕಾರ್ಯಕ್ಕೆ ಸಂಬಂಧಿಸಿದ ಕೆಲಸದ ವೇಳೆ ವಿದ್ಯುತ್ ಶಾಕ್ ತಗುಲಿ ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ತಾಲೂಕಿನ ಶಿರವಾಡದಲ್ಲಿ ನಡೆದಿದೆ.
ಶಿರ್ವೆ ಗ್ರಾಮದ ಸತೀಶ್ ಗೌಡ ಎಂದು ತಿಳಿದುಬಂದಿರುವ ಗಾಯಾಳುವನ್ನು ತಕ್ಷಣ ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಶಾಕ್ನಿಂದ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ನಿರ್ಮಾಣಕ್ಕೆ ಅಗತ್ಯವಿರುವ ಸುಮಾರು 120 ಟನ್ ತೂಕದ ಬೃಹತ್ ಯಂತ್ರವನ್ನು ಕಾರವಾರದಿಂದ ಕೈಗಾ ಕಡೆಗೆ ಸಾಗಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ತಂತಿಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಗಿತ್ತು.
ಈ ಕಾರ್ಯದ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ವಿದ್ಯುತ್ ಶಾಕ್ ತಗುಲಿದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಗಾಯಾಳುವಿನ ಗುರುತು ಮತ್ತು ಘಟನೆಯ ವಿವರಗಳ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಘಟನೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


