ಕರಾವಳಿ ವಾಯ್ಸ್ ನ್ಯೂಸ್
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ವೈ. (ಹುಲ್ಲಪ್ಪ ಯಮನಪ್ಪ) ಮೇಟಿ ಅವರು ಮಂಗಳವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಮೇಟಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.
ಮೇಟಿ ಅವರ ನಿಧನದ ಸುದ್ದಿ ಬಾಗಲಕೋಟೆ ಹಾಗೂ ರಾಜಕೀಯ ವಲಯದಲ್ಲಿ ದುಃಖದ ಅಲೆ ಉಂಟುಮಾಡಿದೆ. ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು.
ಎಚ್.ವೈ. ಮೇಟಿ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿದ್ದರು.
2013 ರಿಂದ 2016ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆ ಸಮಯದಲ್ಲಿ ಲೈಂಗಿಕ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು.
ಮೇಟಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದರಲ್ಲಿ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದಿಂದ ಮೂರು ಭಾರಿ ಹಾಗೂ ಬಾಗಲಕೋಟೆ ಕ್ಷೇತ್ರದಿಂದ ಎರಡು ಭಾರಿ ಆಯ್ಕೆಯಾದಿದ್ದರು. ಅವರು ರಾಜ್ಯ ಸರ್ಕಾರದಲ್ಲಿ ಎರಡು ಭಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮೇಟಿ ಅವರ ನಿಧನದಿಂದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಮುಂದಿನ ಆರು ತಿಂಗಳೊಳಗೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸುವ ಸಾಧ್ಯತೆ ಇದೆ.
ರಾಜ್ಯ ರಾಜಕೀಯ ವಲಯದಲ್ಲಿ ಹಿರಿಯ ನಾಯಕನೊಬ್ಬರನ್ನು ಕಳೆದುಕೊಂಡ ದುಃಖದ ವಾತಾವರಣ ನಿರ್ಮಾಣವಾಗಿದೆ.


