ಕರಾವಳಿ ವಾಯ್ಸ್ ನ್ಯೂಸ್
ಅಂಕೋಲಾ: ಪಟ್ಟಣದ ಕುಂಬಾರಕೇರಿ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮನೆ ಹಾಗೂ ವೆಲ್ಡಿಂಗ್ ಶಾಪಿನ ಮೇಲ್ಚಾವಣಿ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇಲ್ಲಿನ ಮಹಾಲಸಾ ವೆಲ್ಡಿಂಗ್ ಶಾಪ್ ಹಾಗೂ ಅದಕ್ಕೆ ಹೊಂದಿಕೊಂಡಿರುವ ವಾಸದ ಮನೆಗೆ ಸೋಮವಾರ ರಾತ್ರಿ ಸುಮಾರು 10.30ರ ಸುಮಾರಿಗೆ ಅಕಸ್ಮಾತ್ತಾಗಿ ಬೆಂಕಿ ತಗುಲಿದೆ. ಮನೆಯ ಮೇಲ್ಚಾವಣಿ ಸಂಪೂರ್ಣವಾಗಿ ಕಟ್ಟಿಗೆಯಿಂದ ನಿರ್ಮಾಣವಾಗಿದ್ದ ಕಾರಣ, ಬೆಂಕಿಯು ಕ್ಷಣಮಾತ್ರದಲ್ಲಿ ವ್ಯಾಪಿಸಿಕೊಂಡು ಭಾರೀ ಜ್ವಾಲೆಗಳಾಗಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಯಿಂದ ಮನೆ ಒಳಭಾಗ ಹಾಗೂ ಶಾಪಿನ ಮೇಲ್ಛಾವಣಿಗೆ ಭಾರೀ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆ ನಡೆಯುತ್ತಿದ್ದಂತೆ ಮನೆಯಲ್ಲಿದ್ದವರು ಹಾಗೂ ಸ್ಥಳೀಯ ನಿವಾಸಿಗಳು ಗಾಬರಿಗೊಂಡು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬೆಂಕಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ಸಂಭವಿಸಿದ್ದರಿಂದ, ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಸುದ್ದಿ ತಿಳಿದ ತಕ್ಷಣ ಹತ್ತಾರು ಜನರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ವೀಕ್ಷಿಸಿದರು.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಹೆಚ್ಚಿನ ಹಾನಿ ಆಗದಂತೆ ಪಕ್ಕದ ಮನೆಗಳಿಗೆ ಬೆಂಕಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಯಿತು.
ಸ್ಥಳೀಯರ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಅವಘಡ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣದ ಬಗ್ಗೆ ಇನ್ನೂ ತನಿಖೆ ನಡೆಯಬೇಕಿದೆ. ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.
ಸಂಬಂಧಪಟ್ಟ ಇಲಾಖೆಗಳಿಂದ ಪರಿಶೀಲನೆ ನಡೆಯುತ್ತಿದ್ದು, ಅಗ್ನಿ ಅವಘಡದ ನಿಖರ ಕಾರಣ ಮತ್ತು ನಷ್ಟದ ವಿವರಗಳು ತನಿಖೆಯ ನಂತರವೇ ಸ್ಪಷ್ಟವಾಗಲಿವೆ.
