ಕರಾವಳಿ ವಾಯ್ಸ್ ನ್ಯೂಸ್

ಭಟ್ಕಳ: ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಒಟ್ಟು ಒಂಬತ್ತು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ತಾಲೂಕಿನ ವ್ಯಕ್ತಿಯೊಬ್ಬನನ್ನು ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಗೆ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶಿಸಿದ್ದಾರೆ.

Banner Ad

ಗಡಿಪಾರು ಆದೇಶಕ್ಕೆ ಒಳಗಾದವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹನೀಪಾಬಾದ ಮುನೀರ್ ಪಳ್ಳಿ ಸಮೀಪದ ನಿವಾಸಿ ಇಬ್ರಾಯಿಂ ಮೊಹಮ್ಮದ್ ಹುಸೇನ್ ಹವ್ವಾ (47).

ಇಬ್ರಾಯಿಂ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಎರಡು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಐದು ಹಾಗೂ ಮಂಕಿ ಪೊಲೀಸ್ ಠಾಣೆಯಲ್ಲಿ ಎರಡು ಸೇರಿ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಎಂಟು ಪ್ರಕರಣಗಳು ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಹಾಗೂ ಒಂದು ಹಲ್ಲೆ ಪ್ರಕರಣವಾಗಿದೆ.

ಆರೋಪಿಯ ಅಪರಾಧ ಹಿನ್ನೆಲೆ ಹಾಗೂ ಚಟುವಟಿಕೆಗಳಿಂದ ಭಟ್ಕಳ ತಾಲೂಕಿನಲ್ಲಿ ಸಾರ್ವಜನಿಕ ಶಾಂತಿ, ನೆಮ್ಮದಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಪರಿಗಣಿಸಿದ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು, ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಗಡಿಪಾರು ಕ್ರಮ ಕೈಗೊಳ್ಳುವಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ, ಅಭಿಯೋಜನೆ ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿದ ನಂತರ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಮಗ್ರ ಪರಿಶೀಲನೆ ನಡೆಸಿ, ಇಬ್ರಾಯಿಂನನ್ನು 2026ರ ಜೂನ್ 17ರಿಂದ ಜಾರಿಗೆ ಬರುವಂತೆ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯ ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಇಬ್ರಾಯಿಂನನ್ನು ಕೊಪ್ಪಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿ, ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ.

Please Share: