ಕರಾವಳಿ ವಾಯ್ಸ್ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ಕರ್ನಾಟಕ ರಾಜ್ಯದ ಬಹುನಿರೀಕ್ಷಿತ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ ದಾಖಲೆಯ 17ನೇ ಬಜೆಟ್ ಆಗಿದ್ದು, ಈ ಬಾರಿ ಒಟ್ಟು ಬಜೆಟ್ ಗಾತ್ರ ₹4.48 ಲಕ್ಷ ಕೋಟಿ ಆಗಿದೆ. ಕೃಷಿ, ಉದ್ಯೋಗ, ಶಿಕ್ಷಣ ಹಾಗೂ ಸ್ಥಳೀಯ ಸಂಸ್ಕೃತಿ ಕ್ಷೇತ್ರಗಳಿಗೆ ಒತ್ತು ನೀಡಿರುವ ಬಜೆಟ್‌ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ.
ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದ ಕೋಟ್ಯಂತರ ಕುಟುಂಬಗಳ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ,” ಎಂದು ಹೇಳಿದರು.
ಈ ಬಾರಿಯ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸುವ ಮಹತ್ವದ ನಿರ್ಧಾರ ಪ್ರಕಟವಾಗಿದ್ದು, ಮಕ್ಕಳ ಮಾನಸಿಕ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದ ಒಟ್ಟು ಸಾಲದ ಪ್ರಮಾಣವನ್ನು ₹8,24,389 ಕೋಟಿ ಎಂದು ಅಂದಾಜಿಸಲಾಗಿದ್ದು, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
ಉದ್ಯೋಗ ಮತ್ತು ಯುವಜನತೆಗೆ ಸಿಹಿಸುದ್ದಿ
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಕರಿಗೆ ಸರ್ಕಾರ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಿದೆ. ಅಲ್ಲದೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಪ್ರಜಾಪ್ರಭುತ್ವದ ಅರಿವು ಹೆಚ್ಚಿಸಲು ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸುವ ಉದ್ದೇಶವಿದೆ ಎಂದು ತಿಳಿಸಿದರು.
ರೈತರಿಗೆ ಹಲವು ಯೋಜನೆಗಳು
ಕೃಷಿ ವಲಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಯನ್ನು ₹100 ಕೋಟಿ ವೆಚ್ಚದಲ್ಲಿ ಜಾರಿಗೊಳಿಸಲಾಗುವುದು. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಮತ್ತು ಮುಂದಿನ ಮೂರು ವರ್ಷಗಳಲ್ಲಿ ಸಸ್ಯ ಸಂಜೀವಿ ಯೋಜನೆ ಜಾರಿಗೆ ತರಲಾಗುತ್ತದೆ. ರಾಜ್ಯದ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ, 7 ಲಕ್ಷ ರೈತರಿಗೆ ಹನಿ ನೀರಾವರಿ ಸೌಲಭ್ಯ, ಹಾಗೂ ₹363 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ ಮಾಡುವ ಯೋಜನೆ ಘೋಷಿಸಲಾಗಿದೆ. ಜೊತೆಗೆ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ತಿಳಿಸಿದರು.
ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ
ಕರ್ನಾಟಕದ ವಿಶಿಷ್ಟ ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಗುರುತಿನ ಚಿಹ್ನೆ ನೀಡುವ ಉದ್ದೇಶದಿಂದ 50ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಟ್ಯಾಗ್ ಪಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಕನ್ನಡ ಸಾಹಿತ್ಯ ಕ್ಷೇತ್ರದ ಖ್ಯಾತ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಅವರ ಹೆಸರಿನಲ್ಲಿ ಹೊಸ ಟ್ರಸ್ಟ್ ಸ್ಥಾಪನೆಗೂ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಬೆಂಗಳೂರು ಅಭಿವೃದ್ಧಿಗೆ ಬಂಪರ್
ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ₹40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ (ಟನಲ್ ರಸ್ತೆ) ನಿರ್ಮಾಣಕ್ಕೆ ಅನುಮೋದನೆ ನೀಡಲಾಗುವುದು. ಜೊತೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಹೆಸರನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ಮರುನಾಮಕರಣ ಮಾಡುವುದಾಗಿ ಘೋಷಿಸಲಾಗಿದೆ.
ಮದ್ಯ ಪ್ರಿಯರಿಗೆ ಬಿಗ್ ಶಾಕ್
ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಶಾಕ್ ನೀಡುವಂತೆ ಏಕರೂಪ ಅಬಕಾರಿ ಸುಂಕ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಇದರಿಂದ ಮದ್ಯದ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.
ಒಟ್ಟಾರೆ ಕೃಷಿ, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿಯಾಗಲಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.
