ಕರಾವಳಿ ವಾಯ್ಸ್ ನ್ಯೂಸ್

ಕಾರವಾರ: ನಗರದ ಆರ್ಟಿಒ ಕಚೇರಿಯ ಸಮೀಪದಲ್ಲಿ ಗುರುವಾರ ಸಂಜೆ ಸಂಭವಿಸಿದ ದಾರುಣ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತನನ್ನು ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮದ ಚಿರಂಜೀವ್ ಬೃಹ್ಮಾನಂದ ಕುಂಜಿ (15) ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ಕಾರವಾರದ ಮಾಜಾಳಿಯಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ಬಾಲಕ ಗುರುವಾರ ಸಂಜೆ ಬೈಕ್‌ನಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಆರ್ಟಿಒ ಕಚೇರಿಯ ಬಳಿಯಲ್ಲಿ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಬುಲೆಟ್ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಚಿರಂಜೀವ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಸ್ಥಳೀಯರು ತಕ್ಷಣ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ಗಾಯಾಳುಗಳು ಹಾಗೂ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದಲ್ಲಿ ಚಿರಂಜೀವ್ ಅವರ ತಾಯಿ ಹಾಗೂ ಬುಲೆಟ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಗೋವಾದ ಖಾಸಗಿ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಹಾಗೂ ಮುಂದಿನ ತನಿಖೆ ಪ್ರಾರಂಭವಾಗಿದೆ.

 

 

Please Share: