ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ವಿಚಾರದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರು ಮಹತ್ವದ ಹಾಗೂ ಖಡಕ್ ಘೋಷಣೆ ಮಾಡಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಸಿಗದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೇವರ ಸನ್ನಿಧಾನದಲ್ಲೇ ಶಪಥ ಮಾಡಿದ್ದಾರೆ.
ಅಂಕೋಲಾ ತಾಲೂಕಿನ ಆಂದ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಚುನಾವಣೆಯ ಸಂದರ್ಭದಲ್ಲಿ ನಾನು ಜನರಿಗೆ ಮಾತು ಕೊಟ್ಟಿದ್ದೇನೆ. ಈ ಹಿಂದೆಯೂ ಆಸ್ಪತ್ರೆ ಆಗದಿದ್ದರೆ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದೆ. ಈಗಲೂ ಅದಕ್ಕೆ ಬದ್ಧನಾಗಿದ್ದೇನೆ. ಈ ಬಾರಿಯ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನನಗೆ ದೊರೆತಿದೆ” ಎಂದು ಸ್ಪಷ್ಟಪಡಿಸಿದರು.
ಮುಂದುವರಿದು ಮಾತನಾಡಿದ ಶಾಸಕ ಸೈಲ್, “ನಾನು ದೇವರ ಸನ್ನಿಧಾನದಲ್ಲಿ ನಿಂತು ಹೇಳುತ್ತಿದ್ದೇನೆ. ಒಂದು ವೇಳೆ ಈ ಬಾರಿಯ ಬಜೆಟ್‌ನಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದಿದ್ದರೆ, ನೇರವಾಗಿ ಸ್ಪೀಕರ್ ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತೇನೆ” ಎಂದು ಎಚ್ಚರಿಕೆ ನೀಡಿದರು.
ಎಂಸಿಎ (MCA) ಅಧ್ಯಕ್ಷರೂ ಆಗಿರುವ ಸತೀಶ್ ಸೈಲ್ ಅವರ ಈ ಘೋಷಣೆ ಜಿಲ್ಲೆಯಲ್ಲಿ ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದು, ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಏನು ದೊರೆಯಲಿದೆ ಎಂಬುದರ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಾಗಿದೆ.

