ಕರಾವಳಿ ವಾಯ್ಸ್ ನ್ಯೂಸ್ 

ಜೋಯಿಡಾ: ತಾಲೂಕಿನ ಚಾಪೋಲಿ ಕ್ರಾಸ್ ಸಮೀಪ ಗುರುವಾರ ನಡೆದಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ಮುಖಾಮುಖಿ ಡಿಕ್ಕಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Banner Ad

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಜು ಭೋಜೆ ಅವರು ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಗುರುವಾರ ಬೆಳಿಗ್ಗೆ ರಾಮನಗರ–ಜೋಯಿಡಾ ರಸ್ತೆಯ ಚಾಪೋಲಿ ಕ್ರಾಸ್ ಸಮೀಪ ಉಳವಿ–ಇಚಲಕರಂಜಿ ಹಾಗೂ ಬೆಳಗಾವಿ–ಅಂಕೋಲಾ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತದ ವೇಳೆ ಬೆಳಗಾವಿ–ಅಂಕೋಲಾ ಬಸ್‌ನಲ್ಲಿ ಜೋಯಿಡಾಕ್ಕೆ ತೆರಳುತ್ತಿದ್ದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಚಾಲಕ ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ವಿದ್ಯಾರ್ಥಿಗಳು ಮತ್ತು ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ತಕ್ಷಣ ಜೋಯಿಡಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ರಾಜು ಭೋಜೆ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಗೆ ರವಾನಿಸಲಾಗಿತ್ತು.

ಅಪಘಾತ ಸಂಭವಿಸಿದ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಇಲ್ಲದ ಕಾರಣ, ಕೆಲ ಪ್ರಯಾಣಿಕರು ಸಮೀಪದ ಗುಡ್ಡ ಏರಿ ಆಂಬುಲೆನ್ಸ್ ಹಾಗೂ ತುರ್ತು ಸೇವೆಗಳಿಗೆ ಮಾಹಿತಿ ನೀಡಿದ್ದರು. ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.

ಚಾಲಕರ ಸಾವಿನಿಂದ ಅಪಘಾತ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

 

Please Share: