ಕರಾವಳಿ ವಾಯ್ಸ್ ನ್ಯೂಸ್
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–48ರ ಜವನಗೊಂಡನಹಳ್ಳಿ (ಗೊರ್ಲತ್ತು ಕ್ರಾಸ್ ಸಮೀಪ) ಬಳಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ, 9 ಮಂದಿ ಸಜೀವ ದಹನಗೊಂಡು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ (KA 01 AE 5217) ಗೆ ಎದುರಿನಿಂದ ಬಂದ ಕಂಟೇನರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಬಂದು ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ಗೆ ಬೆಂಕಿ ತಗುಲಿ, ನೋಡನೋಡುತ್ತಲೇ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಪರಿಣಾಮವಾಗಿ ಲಾರಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಸಜೀವ ದಹನಗೊಂಡಿದ್ದಾರೆ.
ಬೆಂಕಿಯ ತೀವ್ರತೆಯಿಂದ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಈಗಾಗಲೇ ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರ ಗುರುತು ಪತ್ತೆಗೆ ಬೆಂಗಳೂರು ವಿಧಿವಿಜ್ಞಾನ ಹಾಗೂ ಡಿಎನ್‌ಎ ತಂಡಗಳನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ.
ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಿರಾ ಹಾಗೂ ಹಿರಿಯೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದು, ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ಸಿನಲ್ಲಿ ಬೆಂಗಳೂರಿನ ಮಾವಳ್ಳಿ ಪ್ರದೇಶದ ಏಳು ಮಂದಿ ಗೆಳೆಯರು ಗೋಕರ್ಣ ಪ್ರವಾಸಕ್ಕೆ ಹೊರಟಿದ್ದರು. ದುರದೃಷ್ಟವಶಾತ್, ಈ ತಂಡದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತ, ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ ಮೃತರ ಕುಟುಂಬಗಳಿಗೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಿಸಿದ್ದಾರೆ.
ರಾಜ್ಯ ಸರ್ಕಾರವೂ ಪರಿಹಾರ ಘೋಷಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ‘ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು’ ಎಂದು ತಿಳಿಸಿದ್ದಾರೆ.
ಭೀಕರ ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಪಂದಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

