ಕರಾವಳಿ ವಾಯ್ಸ್ ನ್ಯೂಸ್ 

ಮುಂಡಗೋಡ: ತಾಲೂಕಿನ ಲಕ್ಕೊಳ್ಳಿ ಕ್ರಾಸ್ ಸಮೀಪ ಶನಿವಾರ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಹಾನಗಲ್ ತಾಲೂಕಿನ ಅಕ್ಕಿಆಲೂರು ನಿವಾಸಿಗಳಾದ ಮಹ್ಮದಗೌಸ್ ಇಸ್ಮಾಯಿಲ್ ಸಾಬ್ ಸವಣೂರು ಹಾಗೂ ಮುಜರಮಿಲ್ ಎಂದು ಗುರುತಿಸಲಾಗಿದೆ. ಇವರಲ್ಲಿ ಬೈಕ್‌ನ ಹಿಂಬದಿ ಸವಾರನಾಗಿದ್ದ ಮುಜರಮಿಲ್ ಅವರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹ್ಮದಗೌಸ್ ಅವರಿಗೂ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮಾಹಿತಿ ಪ್ರಕಾರ, ಶಿರಸಿ ಕಡೆಯಿಂದ ಮುಂಡಗೋಡದತ್ತ ಬರುತ್ತಿದ್ದ ಬೈಕ್‌ಗೆ, ಮುಂಡಗೋಡ ಕಡೆಯಿಂದ ಲಕ್ಕೊಳ್ಳಿ ಕಡೆಗೆ ತೆರಳುತ್ತಿದ್ದ ವ್ಯಾಗನಾರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

ಘಟನೆ ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

 

Please Share: