ಕರಾವಳಿ ವಾಯ್ಸ್ ನ್ಯೂಸ್

ಭಟ್ಕಳ: ನಗರದ ನವಾಯತ್ ಕಾಲೋನಿಯ ಸಿಟಿಲೈಟ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Banner Ad

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ನಿವಾಸಿ ತೌಸಿಫ್ (40) ಎಂದು ಗುರುತಿಸಲಾಗಿದ್ದು, ಅವರು ಭಟ್ಕಳದ ಆಜಾದ್ ನಗರದಲ್ಲಿ ವಾಸಿಸುತ್ತಿದ್ದರು. ಗಾಯಗೊಂಡವರನ್ನು ಭಟ್ಕಳದ ಮದೀನಾ ಕಾಲೋನಿಯ ನಿವಾಸಿ ಸೈಯದ್ ಉಮರ್ ರಶಾದ್ ಶೇಖ್ (20) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಸ್ಕೂಟರ್ ಸಿಟಿಲೈಟ್ ಕ್ರಾಸ್‌ನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಂಸುದ್ದೀನ್ ವೃತ್ತದ ಕಡೆಗೆ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಆ ವೇಳೆ ಉಡುಪಿಯಿಂದ ಶಿರಸಿಗೆ ವೇಗವಾಗಿ ಬರುತ್ತಿದ್ದ ಕಾರು, ಲಾರಿಯನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಕೆಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದು, ಇಬ್ಬರೂ ಸವಾರರು ರಸ್ತೆಯ ಮಧ್ಯ ಬಿದ್ದರು.

ಅಪಘಾತದ ಬಳಿಕ ಸ್ಥಳೀಯರು ಗಾಯಾಳುಗಳನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಂದ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಯಿತು. ಆದರೆ ತೌಸಿಫ್ ಅವರು ಮಂಗಳೂರಿಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

Please Share: