ಕರಾವಳಿ ವಾಯ್ಸ್ ನ್ಯೂಸ್ 

ಶಿರಸಿ: ತಾಲೂಕಿನ ದೇವನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ರಗೋಡ ಗ್ರಾಮದಲ್ಲಿ ನಡೆದ ದುರ್ಘಟನೆಯಲ್ಲಿ, ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವಾಗ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಕುದ್ರಗೋಡ ಗ್ರಾಮದ ನಿವಾಸಿ ರಾಮಚಂದ್ರ ಗೌಡ (37) ಎಂದು ಗುರುತಿಸಲಾಗಿದೆ. ಜ.15ರಂದು ರಾಮಚಂದ್ರ ಗೌಡ ಅವರು ತಮ್ಮ ಗ್ರಾಮದ ಅಡಿಕೆ ತೋಟದಲ್ಲಿ ಕೊನೆ ಕೊಯ್ಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ವೇಳೆ, ಮರದ ಮೇಲೆ ನಿಂತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.

ಘಟನೆಯ ಬಳಿಕ ಸ್ಥಳೀಯರು ತಕ್ಷಣ ಅವರನ್ನು ಶಿರಸಿ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಗಾಯಗಳ ತೀವ್ರತೆಯಿಂದಾಗಿ ಹೆಚ್ಚಿನ ಚಿಕಿತ್ಸೆ ಅವಶ್ಯಕವಿದ್ದುದರಿಂದ, ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಜ.16ರಂದು ರಾಮಚಂದ್ರ ಗೌಡ ಅವರು ಕೊನೆಯುಸಿರೆಳೆದಿದ್ದಾರೆ.

ಈ ದುರ್ಘಟನೆಗೆ ಸಂಬಂಧಿಸಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿ.ಎಸ್.ಐ ಸಂತೋಷಕುಮಾರ ಎಂ. ಅವರು ತನಿಖೆಯನ್ನು ಕೈಗೊಂಡಿದ್ದಾರೆ. ಮೃತನ ಅಕಾಲಿಕ ಸಾವಿನಿಂದ ಕುಟುಂಬದಲ್ಲಿ ಶೋಕಮೂಡಿದ್ದು, ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

 

 

Please Share: