ಕರಾವಳಿ ವಾಯ್ಸ್ ನ್ಯೂಸ್
ಕಾರವಾರ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು ಅವರಲ್ಲಿ ಆತ್ಮವಿಶ್ವಾಸ ಹಾಗೂ ಸೃಜನಶೀಲತೆ ಬೆಳೆಸುವಲ್ಲಿ ಇಂತಹ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಎನ್‌ಎಸ್‌ಎನ್ ಕನ್‌ಸ್ಟ್ರಕ್ಷನ್ ಕಂಪನಿಯ ಸಿವಿಲ್ ಎಂಜಿನಿಯರ್ ಗೌರೇಶ ಆನಂದು ಗೋಸಾವಿ ಹೇಳಿದರು.

ಗುರುವಾರ ನಗರದ ಬಾಡದ ಶಿವಾಜಿ ಎಜುಕೇಶನ್ ಸೊಸೈಟಿಯ ಶಂಕರ ಬಾಬಿ ಸಾವಂತ್ ಸಭಾಂಗಣದಲ್ಲಿ ಶಿವಾಜಿ ಬಾಲಮಂದಿರ ಇಂಗ್ಲಿಷ್ ಮೀಡಿಯಂ ಪ್ರಾಥಮಿಕ ಶಾಲೆ ವತಿಯಿಂದ ಆಯೋಜಿಸಿದ್ದ 2026-27ನೇ ಸಾಲಿನ ಶ್ರೀಕೃಷ್ಣ ಹಾಗೂ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಪಠ್ಯದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಭಾಗವಹಿಸಲು ಅವಕಾಶ ನೀಡುವುದರಿಂದ ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಿವಾಜಿ ಎಜುಕೇಶನ್ ಸೊಸೈಟಿಯ ಕಾರ್ಯಕಾರಿ ಸಮಿತಿ ಸದಸ್ಯೆ ಜಯಶ್ರೀ ಎಸ್. ಸೈಲ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಕೆ.ಪಿ. ನಾಯಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರಕಾಶ್ ಕೆ. ರಾಣೆ, ಸಹ ಕಾರ್ಯದರ್ಶಿ ಶಿವಾನಂದ ಕದಂ, ಶಿವಾಜಿ ಬಾಲಮಂದಿರ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಿಲನ್ ಜೆ. ನಾಯಕ ಹಾಗೂ ಶಿವಾಜಿ ಬಾಲಮಂದಿರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ ಮುಖ್ಯ ಶಿಕ್ಷಕಿ ರಾಜೇಶ್ವರಿ ನಾಯಕ ಉಪಸ್ಥಿತರಿದ್ದರು.

ಸ್ಪರ್ಧೆಯ ನಿರ್ಣಾಯಕರಾಗಿ ಅನಿಲ್ ಮಡಿವಾಳ್ ಹಾಗೂ ಗೀತಾ ಶೆಟ್ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳು ಶ್ರೀಕೃಷ್ಣ, ರಾಧೆ ಸೇರಿದಂತೆ ವಿವಿಧ ಆಕರ್ಷಕ ವೇಷಭೂಷಣಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಮಕ್ಕಳ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಮನೋಜ್ಞ ಪ್ರದರ್ಶನವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಕ್ಕಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


