ನವದೆಹಲಿ: ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಬೆಂಗಳೂರು ನಿವಾಸಿಯೊಬ್ಬರು ಅರ್ಜಿ ಸಲ್ಲಿಸಿ, ಚಾಮುಂಡಿ ದೇವಿ ಪೂಜೆ ಹಾಗೂ ದಸರಾ ಉದ್ಘಾಟನೆಗೆ ಹಿಂದೂಯೇತರರನ್ನು ಆಹ್ವಾನಿಸುವುದು ಸೂಕ್ತವಲ್ಲ ಎಂದು ವಾದಿಸಿದ್ದರು. ಇದೇ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ಬಾನು ಮುಷ್ತಾಕ್ ಅವರು ಹಿಂದಿನಿಂದಲೇ ಹಿಂದೂ ವಿರೋಧಿ ಹೇಳಿಕೆಗಳನ್ನು ನೀಡಿರುವುದರಿಂದ ಅವರ ಭಾಗವಹಿಸುವಿಕೆ ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು.
ಅರ್ಜಿಯನ್ನು ತುರ್ತು ವಿಚಾರಣೆಗೆ ಸ್ವೀಕರಿಸಿದ್ದ ಸುಪ್ರೀಂ ಕೋರ್ಟ್, ಸಿಜೆಐ ಬಿ.ಆರ್. ಗವಾಯಿ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಿ, ಸರ್ಕಾರದ ಕ್ರಮದಲ್ಲಿ ಯಾವುದೇ ತಪ್ಪಿಲ್ಲವೆಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ.


